ಕಳೆದೊಂದು ವಾರದಿಂದ ರಾಜ್ಯದ ಬಹುತೇಕ ಕಡೆ ಮಳೆ ಜೋರಾಗಿದ್ದು, ರಾಜ್ಯದಲ್ಲಿ ಪೂರ್ವ ಮುಂಗಾರಿನ ಅಬ್ಬರ ಸಕ್ಕತ್ತಾಗಿದೆ. ಇದರ ನಡುವೆ ಮುಂದಿನ ನಾಲ್ಕೈದು ದಿನ ಮತ್ತೆ ಮಳೆ ಆರ್ಭಟ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ರಾಜ್ಯದಾದ್ಯಂತ ಮುಂದಿನ ನಾಲ್ಕೈದು ದಿನ ಮತ್ತೆ ಮಳೆ ಆರ್ಭಟ ಸಾಧ್ಯತೆಯಿದೆ. ರಾಜ್ಯದ ಅನೇಕ ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ ಕೂಡ ಇದೆ ಎಂದು ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ.
ಮೇಲ್ಮೈ ಸುಳಿಗಾಳಿ, ಟ್ರಫ್ ಹಾಗೂ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಇಂದಿನಿಂದ ಐದು ದಿನ ರಾಜ್ಯದ 17 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ ಮಾಡಲಾಗಿದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಮೈಸೂರು, ಹಾಸನ, ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ, ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ, ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ. ಜೊತೆಗೆ ಉತ್ತರ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಇಂದಿನಿಂದ ಮೂರು ದಿನ ಕರಾವಳಿ ಎಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ 5 ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು,
ಉತ್ತರ ಕರ್ನಾಟಕದ ಭಾಗಗಳಿಗೆ ಸಾಧಾರಣ ಮಳೆ ಮುನ್ಸೂಚನೆ ನೀಡಲಾಗಿದೆ. ಜೊತೆಗೆ ಬಹುತೇಕ ಕಡೆ ಮಳೆ ಜೊತೆಗೆ ಬಿರುಗಾಳಿ ಸಹಿತ ಮಳೆ, ಗುಡುಗು ಮಿಂಚಿನ ಎಚ್ಚರಿಕೆ ಕೂಡ ನೀಡಲಾಗಿದೆ.
ಬೆಂಗಳೂರಿನಲ್ಲೂ ಮಳೆಯ ಅಬ್ಬರ ಮುಂದುವರೆಯುವ ಸಾಧ್ಯತೆ ಇದ್ದು, ಮುಂದಿನ ಒಂದು ವಾರ ನಗರದ ಹಲವೆಡೆ ಭಾರಿ ಮಳೆಯ ನಿರೀಕ್ಷೆ ಮಾಡಲಾಗಿದೆ. ಹಲವೆಡೆ ಭಾರೀ ಗುಡುಗು ಸಹಿತ ಮಳೆಯ ಬಗ್ಗೆ ಎಚ್ಚರಿಕೆಯನ್ನ ಕೂಡ ಹವಾಮಾನ ಇಲಾಖೆ ನೀಡಿದೆ.