ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಶುಕ್ರವಾರದಿಂದ ಆರು ದಿನಗಳ ಕಾಲ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೈಸೂರು ಮತ್ತು ಕೊಡಗು ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಶುಕ್ರವಾರದಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಶನಿವಾರದಿಂದ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಕೆಲವೆಡೆಯೂ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಧಾರವಾಡ, ಗದಗ ಸೇರಿ ಕೆಲ ಜಿಲ್ಲೆಗಳಲ್ಲಿ ಏಪ್ರಿಲ್ 2ರವರೆಗೂ ಸಾಧಾರಣ ಮಳೆ ಮುಂದುವರಿಯುವ ಸಂಭವವಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಐದು ದಿನಗಳಲ್ಲಿ ಉತ್ತರ ಒಳನಾಡಿನಲ್ಲಿ 2ರಿಂದ 4 ಡಿಗ್ರಿ ಸೆಲ್ಸಿಯಸ್ ಹಾಗೂ ದಕ್ಷಿಣ ಒಳನಾಡಿನಲ್ಲಿ 2ರಿಂದ 3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಹೆಚ್ಚಳವಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಲಬುರಗಿಯಲ್ಲಿ (39.8 ಡಿಗ್ರಿ ಸೆಲ್ಸಿಯಸ್) ಗರಿಷ್ಠ ಉಷ್ಣಾಂಶ ದಾಖಲಾಗಿದೆ.