ಬೆಂಗಳೂರು: ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರು ಕಲುಷಿತಗೊಳ್ಳದಂತೆ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರು ಸರಬರಾಜಾಗುವ ಕೊಳವೆಗಳಿಗೆ ಕಲುಷಿತ ನೀರು ಸೇರಿಕೊಳ್ಳುವ ಸಾಧ್ಯತೆಗಳಿರುತ್ತವೆ. ಗ್ರಾಮೀಣ ಭಾಗದ ಜನರು ಎಚ್ಚರಿಕೆಯಿಂದ ಇರಬೇಕು. ಅದರಲ್ಲಿಯೂ ಕುಡಿಯುವ ನೀರು ಕಲುಷಿತಗೊಳ್ಳುವ ಸಾಧ್ಯತೆಗಳಿದ್ದು ನೀರನ್ನು ಕಾಯಿಸಿ ಸೇವಿಸಬೇಕೆಂದು ಸಚಿವರು ಮನವಿ ಮಾಡಿದ್ದಾರೆ. ಈ ಕುರಿತು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕೆಂದು ಸಚಿವರು ಸೂಚಿಸಿದ್ದಾರೆ.
ಭಾರಿ ಮಳೆ ಸುರಿಯುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ. ಶಾಲೆಗಳು ಪುನರಾರಂಭವಾಗುತ್ತಿದ್ದು, ಮಕ್ಕಳ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು. ಈ ಸಂಬಂಧ ಪ್ರತಿ ಗ್ರಾಮದಲ್ಲಿಯೂ ನಿಯಮಿತವಾಗಿ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಗಳಲ್ಲಿ ಪರೀಕ್ಷೆಗೆ ಒಳಪಡಿಸಲು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ನೀರಿನ ಮೂಲಗಳು ಹಾಗೂ ನೀರು ಸರಬರಾಜಾಗುವ ಕೊಳವೆ ಮಾರ್ಗಗಳನ್ನು ಸುಸ್ಥಿತಿಯಲ್ಲಿರಿಸಿಕೊಳ್ಳಬೇಕು. ನೀರು ಕಲುಷಿತಗೊಳ್ಳದಂತೆ ತಡೆಯಲು ಅಧಿಕಾರಿಗಳು ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕು. ನೀರು ಮಾದರಿ ಪರೀಕ್ಷೆ ಮಾಡುವ ಪ್ರಯೋಗಾಲಯಗಳು ಸದಾ ಸುವ್ಯವಸ್ಥಿತವಾಗಿರಬೇಕು ಎಂದೂ ತಿಳಿಸಿದ್ದಾರೆ.
ನೀರು ಮಾದರಿ ಪರೀಕ್ಷೆಯಲ್ಲಿ ಅನುಮಾನ ಕಂಡುಬಂದಲ್ಲಿ ತಕ್ಷಣ ಅಂತಹ ಪ್ರದೇಶಗಳಿಗೆ ಕೊಳವೆ ನೀರು ಪೂರೈಕೆ ನಿಲ್ಲಿಸಿ, ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು. ನೀರಿನ ಮೂಲಗಳನ್ನು ಸಂರಕ್ಷಿಸುವುದು ಅತ್ಯಂತ ಮುಖ್ಯವಾಗಿದ್ದು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕೆಂದು ಸಚಿವರು ಸೂಚನೆ ನೀಡಿದ್ದಾರೆ.