ಯುಗಾದಿ, ರಂಜಾನ್​​ ಹಬ್ಬಕ್ಕೆ ಬೆಂಗಳೂರಿನಿಂದ 2000 ವಿಶೇಷ ಬಸ್‌ ವ್ಯವಸ್ಥೆ: ಮಾರ್ಚ್‌ 28 ರಿಂದ 30 ರವರೆಗೆ ಈ ಸೌಲಭ್ಯ

Most read

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್‌ ಆರ್‌ ಟಿಸಿ) ಯುಗಾದಿ ಹಾಗೂ ರಂಜಾನ್​​ ಹಬ್ಬದ ಪ್ರಯುಕ್ತ 2000 ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ. ಮಾರ್ಚ್ 30ರಂದು ಚಂದ್ರಮಾನ ಯುಗಾದಿ, ಮಾ.31ರಂದು ರಂಜಾನ್ ಹಬ್ಬವಿದ್ದು, ಕೆಎಸ್‌ ಆರ್‌ ಟಿಸಿ, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಾ.28 ರಿಂದ ಮಾ.30ರವರೆಗೆ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 2000 ಹೆಚ್ಚುವರಿ ವಾಹನಗಳ ವ್ಯವಸ್ಥೆ ಮಾಡಿದೆ. ನಂತರ ರಾಜ್ಯದ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಮರಳಲು ಮಾರ್ಚ್ 31ರಂದು ವಿಶೇಷ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ.

ಮೆಜೆಸ್ಟಿಕ್​ನಿಂದ ಎಲ್ಲಿಗೆ ?

ಮೆಜೆಸ್ಟಿಕ್ ನಿಂದ ಧರ್ಮಸ್ಥಳ, ಶೃಂಗೇರಿ, ಹೊರನಾಡು, ಮಂಗಳೂರು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಗೋಕರ್ಣ, ಕಾರವಾರ ಭಾಗ;

ಮೆಜೆಸ್ಟಿಕ್ ನಿಂದ ಉತ್ತರ ಕರ್ನಾಟಕದ ಹುಬ್ಬಳಿ,ಬೆಳಗಾವಿ, ದಾರವಾಡ, ವಿಜಯಪುರ,ಯಾದಗಿರಿ ಸೇರಿ ಇತರೆಡೆ;

ಮೆಜೆಸ್ಟಿಕ್ ನಿಂದ ತಿರುಪತಿ, ವಿಜಯವಾಡ, ಹೈದರಾಬಾದ್ ಕಡೆಗೆ ಬಸ್ ಗಳು ಸಂಚರಿಸಲಿವೆ.

ಸ್ಯಾಟಲೈಟ್‌ ಬಸ್‌ ನಿಲ್ದಾಣದಿಂದ ಎಲ್ಲಿಗೆ?

ಮೈಸೂರು ರಸ್ತೆಯ ಸ್ಯಾಟಲೈಟ್‌ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ವಿಶೇಷ ಬಸ್​​ಗಳು ಕಾರ್ಯಾಚರಣೆ ನಡೆಸಲಿವೆ.

ಶಾಂತಿನಗರ ಬಸ್‌ ನಿಲ್ದಾಣದಿಂದ ಎಲ್ಲಿಗೆ?

ಶಾಂತಿನಗರ ಬಿಎಂಟಿಸಿ ಬಸ್​​ ನಿಲ್ದಾಣದಿಂದ ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಐಷಾರಾಮಿ ಬಸ್‌ ಗಳ ವ್ಯವಸ್ಥೆ ಮಾಡಲಾಗಿದೆ.  ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.

ಇ-ಟಿಕೇಟ್ ಬುಕಿಂಗ್‌ ಸೌಲಭ್ಯವೂ ಉಂಟು:

ಇ-ಟಿಕೇಟ್ ಬುಕಿಂಗ್‌ನ್ನು https://ksrtc.in/ ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ. ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಕೆ ಎಸ್​​​ ಆರ್​ ಟಿ ಸಿ ತಿಳಿಸಿದೆ.

More articles

Latest article