ಭೋಪಾಲ್: ಮಹಿಳಾ ಬಿಜೆಪಿ ನಾಯಕಿಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಪಕ್ಷದ ಮುಖಂಡನೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿ ಬಿಜೆಪಿ ಮುಖಂಡ ಅಜಿತ್‌ಪಾಲ್ ಸಿಂಗ್ ಚೌಹಾಣ್ ಎಂದು ಗುರುತಿಸಲಾಗಿದೆ. ಈತ ಸಂತ್ರಸ್ತೆಯ ಪತಿಯನ್ನು ಕೊಲ್ಲುವುದಾಗಿಯೂ ಬೆದರಿಕೆ ಹಾಕಿದ್ದಾನೆ. ಅಶ್ಲೀಲ ವಿಡಿಯೊ ತೋರಿಸಿ ಹಣ ನೀಡುವಂತೆಯೂ ಕಿರುಕುಳ ನೀಡಿದ್ದಾರೆ ಎಂದು ಬಿಜೆಪಿ ನಾಯಕಿಯೂ ಆಗಿರುವ ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಪಕ್ಷದ ಟಿಕೆಟ್ ಕೊಡಿಸುವ ಭರವಸೆ ನೀಡಿ ಸಂತ್ರಸ್ತೆಯ ಮೇಲೆ ಅತ್ಯಾಚಾರ ಎಸಗಲಾಗಿದೆ. ಆರೋಪಿ ಘಟನೆಯನ್ನು ವಿಡಿಯೊ ಚಿತ್ರೀಕರಿಸಿಕೊಂಡು ಹಣ ನೀಡುವಂತೆ ಪದೇ ಪದೇ ಕಿರುಕುಳ ನೀಡುತ್ತಿದ್ದ ಎಂದು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ. ಚೌಹಾಣ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 64 (1) (ಅತ್ಯಾಚಾರ), 308 (5) (ಸುಲಿಗೆ), 296 (ಅಶ್ಲೀಲ ಕೃತ್ಯ) ಮತ್ತು 351 (3) (ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಅಜಿತ್‌ಪಾಲ್ ಸಿಂಗ್ ಚೌಹಾಣ್ ನನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ ಎಂದು ವರದಿಯಾಗಿದೆ.