ಆರ್‌ ಸಿಬಿ ಸಂಭ್ರಮಾಚರಣೆ; ಕಾಲ್ತುಳಿತ ಪ್ರಕರಣ, ಐಪಿಎಸ್​ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದುಪಡಿಸಿದ ಸಿಎಟಿ

Most read

ಬೆಂಗಳೂರು: ಐಪಿಎಲ್‌ ನಲ್ಲಿ ಕಪ್‌ ಗೆದ್ದಿದ್ದ ರಾಯಲ್ ಚಾಲೆಂಜರ್ಸ್ ತಂಡದ ವಿಜಯೋತ್ಸವ ಆಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐಪಿಎಸ್ ಅಧಿಕಾರಿ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅಮಾನತು ನಿರ್ಧಾರವನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಇಂದು ರದ್ದುಪಡಿಸಿ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಬಿ.ಕೆ. ಶ್ರೀವಾತ್ಸವ ಮತ್ತು ಸಂತೋಷ್ ಮೆಹ್ರಾ ಅವರಿದ್ದ ಪೀಠ ಈ ಆದೇಶ ನೀಡಿದ್ದು, ಹಿಂದಿನ ಎಲ್ಲಾ ಭತ್ಯೆ ಮತ್ತು ಸೌಲಭ್ಯಗಳನ್ನುಒದಗಿಸುವಂತೆ ನಿರ್ದೇಶನ ನೀಡಿದೆ. ವಿಕಾಸ್ ಕುಮಾರ್ ಪರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ವಾದಿಸಿದ್ದರು

ಆರ್​ಸಿಬಿ ಗೆಲುವನ್ನು ಸಂಭ್ರಮಿಸಲು ಜೂನ್ 3 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಕ್ರೀಡಾಂಗಣಕ್ಕೆ ಲಕ್ಷಾಂತರ ಅಭಿಮಾನಿಗಳು ಏಕಾಏಕಿ ಆಗಮಿಸಿದ್ದರು. ಆ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಟ್ಟಿದ್ದರು. ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ಅವರನ್ನು ಅಮಾನತು ಮಾಡಿತ್ತು. ಈ ಅಮಾನತು ಪ್ರಶ್ನಿಸಿ ವಿಕಾಸ್​ ಕುಮಾರ್ ಅವರು ಸಿಎಟಿ ಮೊರೆ ಹೋಗಿದ್ದರು.

ಐಪಿಎಸ್​ ಅಧಿಕಾರಿ ವಿಕಾಸ್ ಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿ ವಿವರಣೆ ಕೋರಿತ್ತು. ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಜಿ ಹೆಚ್ಚುವರಿ ಕಾಲಾವಕಾಶ ಕೋರಿದ್ದರು. ಅದರಂತೆ ವಿಚಾರಣೆ ಮುಂದೂಡಲಾಗಿತ್ತು. ವಿಕಾಸ್ ಕುಮಾರ್ ಅವರ ಅಮಾನತು ಆದೇಶ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಸಿಎಟಿ ನಿರ್ದೇಶನ ನೀಡಿದೆ. ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಅವರ ಅಮಾನತು ಆದೇಶ ಏನಾಗಲಿದೆ ಎಂಬ ಕುತೂಹಲ ಮೂಡಿದೆ.

More articles

Latest article