ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ, ಉತ್ತರಾಧಿಕಾರಿ ಬದಲಾವಣೆ, ನವೆಂಬರ್ ಕ್ರಾಂತಿ, ಸಂಪುಟ ಪುನಾರಚನೆ ಕುರಿತು ಬಿರುಸಿನ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಕಂದಾಯ ಸಚಿವ ಕೃಷ್ಣ ಭೈರೇಗೌಡ ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧನಿದ್ದೇನೆ. ಅರ್ಹತೆಗೂ ಮೀರಿ ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ವರಿಷ್ಠರಿಗೆ ನಾನು ಸದಾ ಆಭಾರಿಯಾಗಿರುತ್ತೇನೆ ಎಂದು ಹೇಳಿದ್ದಾರೆ.
ಹಾಸನ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಅವರು, ಈ ವರ್ಷ ದಾಖಲೆಯ 26 ಲಕ್ಷ ಭಕ್ತರು ಹಾಸನಾಂಬ ದೇವಿ ದರ್ಶನ ಪಡೆದಿದ್ದು, ಇವರ ಪೈಕಿ ಶೇ. 60ರಷ್ಟು ಮಹಿಳೆಯರು ಎಂದು ತಿಳಿಸಿದ್ದಾರೆ. ಉಚಿತ ಪ್ರಯಾಣದ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಯಿಂದಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ದೇವಿ ದರ್ಶನ ಪಡೆಯಲು ಸಾಧ್ಯವಾಗಿದೆ. ಜನಸಾಮಾನ್ಯರೂ ಸುಲಭ ಮತ್ತು ತ್ವರಿತವಾಗಿ ದರ್ಶನ ಸಿಗುವಂತೆ ಮಾಡಿದ್ದೇವೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

