ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ನ್ಯಾಯಾಂಗ ಬಂಧನದಲ್ಲಿರುವ ನಟ, ಆರೋಪಿ ದರ್ಶನ್ ತೂಗುದೀಪ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವುದಕ್ಕೆ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಸೆಷೆನ್ಸ್ ನ್ಯಾಯಾಲಯ ಆಗಸ್ಟ್ 23ಕ್ಕೆ ಮುಂದೂಡಿದೆ.
ನಗರದ ಪರಪ್ಪನ ಅಗ್ರಹಾರದಲ್ಲಿ ವಿಐಪಿ ಆತಿಥ್ಯ ಪಡೆದಿದ್ದ ಕಾರಣಕ್ಕೆ ಈ ಪ್ರಕರಣದ ಆರೋಪಿಗಳನ್ನು ರಾಜ್ಯದ ವಿವಿಧ ಕಾರಾಗೃಹಗಳಿಗೆ ಈ ಹಿಂದೆ ಸ್ಥಳಾಂತರಿಸಲಾಗಿತ್ತು. ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ ವಿಶೇಷ ಆತಿಥ್ಯ ಪಡೆಯಬಹುದು ಎಂಬ ಕಾರಣಕ್ಕೆ ಐವರು ಆರೋಪಿಗಳನ್ನು ಸ್ಥಳಾಂತರ ಮಾಡಲು ಅನುಮತಿ ನೀಡಬೇಕು ಎಂದು ಕೋರಿ ಪ್ರಾಸಿಕ್ಯೂಷನ್ ಪರ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ, ಜಗದೀಶ್ ಮತ್ತು ಲಕ್ಷ್ಮಣ್ ಅವರನ್ನು ಶಿವಮೊಗ್ಗ ಕಾರಾಗೃಹಕ್ಕೆ, ನಾಗರಾಜ್ ಅವರನ್ನು ಕಲಬುರಗಿ ಜೈಲಿಗೆ, ಪ್ರದೂಷ್ ರಾವ್ ಅವರನ್ನು ಬೆಳಗಾವಿ ಕಾರಾಗೃಹಕ್ಕೆ ವರ್ಗಾವಣೆ ಮಾಡುವಂತೆ ಪ್ರಾಸಿಕ್ಯೂಷನ್ ಪರ ವಕೀಲರು ಅರ್ಜಿಯಲ್ಲಿ ತಿಳಿಸಿದ್ದಾರೆ. ಪವಿತ್ರಾ ಗೌಡ ಮತ್ತು ಅನುಕುಮಾರ್ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲೇ ಇರಬೇಕು ಎಂದೂ ತಿಳಿಸಿದ್ದಾರೆ.
ದರ್ಶನ್ ಪರ ವಕೀಲರು ಆಗಸ್ಟ್ 14ರಂದು ಬೇರೆ ಕಾರಾಗೃಹಕ್ಕೆ ಸ್ಥಳಾಂತರ ಮಾಡುವುದಾದರೆ ನಮ್ಮ ವಾದವನ್ನೂ ಆಲಿಸಬೇಕು ಎಂದು ಮನವಿ ಮಾಡಿಕೊಂಡಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು, ದರ್ಶನ್ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿ ಮುಂದಿನ ವಿಚಾರಣೆಯನ್ನು ಆಗಸ್ಟ್ 23ಕ್ಕೆ ಮುಂದೂಡಿದರು.
ಈ ಮಧ್ಯೆ ವಿಜಯಲಕ್ಷ್ಮಿ ಅವರು ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಭೇಟಿ ನೀಡಿ ಪತಿ ದರ್ಶನ್ ಅವರ ಆರೋಗ್ಯ ವಿಚಾರಿಸಿದರು. ಮುಂದಿನ ಕಾನೂನು ಹೋರಾಟ ಕುರಿತೂ ಚರ್ಚೆ ನಡೆಸಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.