ಬೆಂಗಳೂರು: ಜನವರಿ 26 ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಅಂದು ಬೆಳಗ್ಗೆ 9 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ವಿವಿರಗಳನ್ನು ನೀಡಿದ್ದು, ಈ ಭಾರಿಯೂ ಗಣರಾಜ್ಯೋತ್ಸವಕ್ಕೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ಭದ್ರತೆಗಾಗಿ 8 ಮಂದಿ ಡಿಸಿಪಿ, 17 ಮಂದಿ ಎಸಿಪಿ, 44 ಮಂದಿ ಪಿಐ, 114 ಮಂದಿ ಪಿಎಸ್ಐ, 58 ಮಂದಿ ಎಎಸ್ಐ, 80 ಮಂದಿ ಸಿಬ್ಬಂದಿ, 30 ಜನ ಕ್ಯಾಮೆರಾ ಸಿಬ್ಬಂದಿ ಸೇರಿದಂತೆ ಒಟ್ಟು 1051 ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಬಂದೋಬಸ್ತ್ಗೆ 10 ಕೆಎಸ್ಆರ್ಪಿ ತುಕಡಿ, 2 ಅಗ್ನಿಶಾಮಕ ವಾಹನ, ಕ್ಷಿಪ್ರ ಕಾರ್ಯಾಚರಣೆ ತಂಡವೂ ಇರುತ್ತದೆ. ಮೈದಾನದ ಸುತ್ತ 103 ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ ಎಂದಿದ್ದಾರೆ.
ಕಲರ್ ಕೋಡ್ಗಳ ಮೂಲಕ ಪಾಸ್ ವಿತರಿಸಿ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಪಿಂಕ್ ಬಣ್ಣದ ಪಾಸ್ ನೀಡಲಾಗುತ್ತದೆ. ವಿಐಪಿ ಪಾಸ್ ಹೊಂದಿರುವವರು ಗೇಟ್-2ರ ಮೂಲಕ ಪ್ರವೇಶಿಸಬಹುದಾಗಿದೆ. ಮುಖ್ಯ ಅತಿಥಿಗಳು, ಗಣ್ಯರು ಗೇಟ್-3 ಮೂಲಕ ಪ್ರವೇಶಿಸಬಹುದು. ಗೇಟ್-4ರಲ್ಲಿ ಬಿಳಿ ಪಾಸ್ ನೀಡಲಾಗುತ್ತದೆ, ಇಲ್ಲಿ ಮಾಧ್ಯಮದವರಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.
ಜ.26ರಂದು ಬೆಳಗ್ಗೆ 8.30 ರಿಂದ 10.30ರವರೆಗೆ ಕಬ್ಬನ್ ರಸ್ತೆ, ಕಾಮರಾಜ ರಸ್ತೆ, ಬಿಆರ್ವಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ರಸ್ತೆಗಳಲ್ಲಿ ಸಂಚರಿಸಲು ನಗರ ಸಂಚಾರ ಪೊಲೀಸರ ಸೂಚನೆ ನೀಡಿದ್ದಾರೆ. ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತ, ಶಿವಾಜಿನಗರ ಬಸ್ ನಿಲ್ದಾಣ, ಕಬ್ಬನ್ ರಸ್ತೆ, ಸಿಟಿಒ ವೃತ್ತದಿಂದ ಕೆ.ಆರ್.ರಸ್ತೆ, ಕಬ್ಬನ್ ಜಂಕ್ಷನ್ವರೆಗೆ, ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.