Thursday, December 12, 2024

ಹಾಸ್ಯಾಸ್ಪದ, ದ್ವೇಷಪೂರಿತ ಎಫ್ಐಆರ್: ಕುಮಾರಸ್ವಾಮಿ ಆಕ್ರೋಶ

Most read

ಚನ್ನಪಟ್ಟಣ/ರಾಮನಗರ: ಐಪಿಎಸ್ ಅಧಿಕಾರಿಯೊಬ್ಬರ ದೂರಿನ ಮೇರೆಗೆ ನನ್ನ ವಿರುದ್ಧ ಪೊಲೀಸರು ದಾಖಲು ಮಾಡಿರುವ ಎಫ್ಐಆರ್ ಹಾಸ್ಯಾಸ್ಪದ, ದುರುದ್ದೇಶಪೂರಿತ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಪ್ರಚಾರದಲ್ಲಿ ನಿರತರಾಗಿದ್ದಾಗ ಅಕ್ಕೂರು ಹೊಸಹಳ್ಳಿ ಗ್ರಾಮದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಸಚಿವರು ಉಪ ಚುನಾವಣೆ ಸಮಯದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಭಾರೀ ಉಮೇದಿನಿಂದ ನಮ್ಮ ವಿರುದ್ಧ ದ್ವೇಷ ಸಾಧನೆ ಮಾಡುತ್ತಿದೆ. ಇದಕ್ಕೆ ನ್ಯಾಯಾಲಯದ ಮೂಲಕವೇ ಉತ್ತರ ಕೊಡುತ್ತೇನೆ ಎಂದು ಗುಡುಗಿದರು.

ಎಫ್ ಐಆರ್ ಪ್ರತಿಯನ್ನು ಓದಿದ್ದೇನೆ. ಅದರಲ್ಲಿರುವ ದೂರಿನ ಸಾರಾಂಶವನ್ನೂ ಓದಿದ್ದೇನೆ. ಅದು ಸಂಪೂರ್ಣ ಹಾಸ್ಯಾಸ್ಪದ ಹಾಗೂ ದುರದ್ದೇಶಪೂರಿತ ಎನ್ನುವುದು ನನಗೆ ಅರ್ಥವಾಗಿದೆ. ಕುಮಾರಸ್ವಾಮಿ ಅವರು ಮಾಧ್ಯಮಗೋಷ್ಠಿ ಮಾಡಿ ನನ್ನ ವಿರುದ್ಧ ಆರೋಪ ಮಾಡಿದ್ದು, ಕ್ರಮ ಕೈಗೊಳ್ಳಿ ಎಂದು ದೂರುದಾರರು ದೂರಿನಲ್ಲಿ ಹೇಳಿದ್ದಾರೆ. ನಾನು ಅವರ ಬಗ್ಗೆ ತಪ್ಪು ಮಾಹಿತಿ ನೀಡಿದೇನೆ ಎಂದು ಹೇಳಿಕೊಂಡಿದ್ದಾರೆ. ಬೇಕಾದರೆ ನನ್ನ ಮಾಧ್ಯಮಗೋಷ್ಠಿಯ ವಿಡಿಯೋ ನೋಡಿಕೊಳ್ಳಲಿ ಎಂದು ಕೇಂದ್ರ ಸಚಿವರು ತಿರುಗೇಟು ನೀಡಿದರು.

ನಾನು ಪ್ರೆಸ್ ಮೀಟ್ ಮಾಡಿದೆ ಎಂದು ಎಫ್ಐಆರ್ ಮಾಡಿಸಿದ್ದಾರೆ. ಹೇಳಿಕೆ ನೀಡಿದರು ಎಂದು ಚನ್ನಪಟ್ಟಣದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಮೇಲೆಯೂ ಎಫ್ಐಆರ್ ಮಾಡಿಸಿದ್ದಾರೆ. ಮುಖ್ಯ ಕಾರ್ಯದರ್ಶಿಗೆ ದೂರು ಕೊಟ್ಟರು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ಮೇಲೂ ಎಫ್ಐಆರ್ ಮಾಡಿಸಿದ್ದಾರೆ. ಹಾಗಾದರೆ, ಯಾರೂ ಯಾರ ವಿರುದ್ಧ ಮಾತನಾಡಬಾರದು, ದೂರು ನೀಡಬಾರದು ಎಂಬ ಕಾನೂನು ಇದೆಯೇ? ನಮ್ಮ ಬಾಯಿ ಮುಚ್ಚಿಸಲು ಇವರಿಂದ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವರು ಕಿಡಿ ಕಾರಿದರು.

ಇದೊಂದು ಷಡ್ಯಂತ್ರ ಹಾಗೂ ಕುತಂತ್ರದ ಭಾಗ. ಯಾವಾಗ ಚನ್ನಪಟ್ಟಣದಲ್ಲಿ ಇವರ ಮೋಸ, ಕುತಂತ್ರ ನಡೆಯುವುದಿಲ್ಲ ಎಂದು ಅರಿವಾದಾಗ ಹೊಸ ಕುತಂತ್ರಕ್ಕೆ ಮುಂದಾಗಿದ್ದಾರೆ. ನಮಗೆ ಬಾಬಾ ಸಾಹೇಬ ಅಂಬೇಡ್ಕರ್ ಅವರ ಸಂವಿಧಾನ ಕಾನೂನಿನ ಮೇಲೆ ಗೌರವ ಇದೆ. ನನ್ನ ಚನ್ನಪಟ್ಟಣದ ಜನರ ಮೇಲೆ ವಿಶ್ವಾಸ ಇದೆ. ಹೀಗಿರುವಾಗ ಇಂತಹ ನೂರು ಎಫ್ ಐಆರ್ ಗಳು ದಾಖಲಾದರೂ ನಾವು ಧೃತಿಗೆಡುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

More articles

Latest article