ಎಸ್‌ ಸಿ ಒಳ ಮೀಸಲಾತಿ ಅನುಷ್ಠಾನ ಸಭೆ: ಯಾವುದೇ ಜಾತಿಗೂ ರೋಸ್ಟರ್‌ ನಲ್ಲಿ ಅನ್ಯಾಯವಾಗದಂತೆ ಎಚ್ಚರವಹಿಸಲು ಸಿಎಂ ಸೂಚನೆ

Most read

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಇರುವ ಸಮಸ್ಯೆಗಳನ್ನು ಕುರಿತು ಸಭೆ ನಡೆಯಿತು. ಸಭೆಯಲ್ಲಿ ಸಚಿವರಾದ ಜಿ.ಪರಮೇಶ್ವರ್, ಎಚ್.ಸಿ.ಮಹಾದೇವಪ್ಪ, ಕೆ.ಎಚ್.ಮುನಿಯಪ್ಪ, ಶಿವರಾಜ ತಂಗಡಗಿ, ಎಚ್.ಕೆ.ಪಾಟೀಲ್, ಪ್ರಿಯಾಂಕ ಖರ್ಗೆ, ಬಿ.ಆರ್.ತಿಮ್ಮಾಪುರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತಿತರರು ಉಪಸ್ಥಿತರಿದ್ದರು.

ಸಭೆಯಲ್ಲಿ ಮುಖ್ಯಮಂತ್ರಿಗಳು ಹಲವು ಸಲಹೆ ಸೂಚನೆಗಳನ್ನು ನೀಡಿದರು.

ಒಳ ಮೀಸಲಾತಿ ಕುರಿತಾಗಿ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು. ರೋಸ್ಟರ್ ಜಾರಿ ಕುರಿತಾಗಿ ಎಲ್ಲರ ಅಹವಾಲುಗಳನ್ನು ಆಲಿಸಬೇಕು. ಯಾವುದೇ ಜಾತಿಗಳಿಗೂ ರೋಸ್ಟರ್‌ ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ಜಾತಿ ಪ್ರಮಾಣ ಪತ್ರ ಯಾವ ರೀತಿಯಲ್ಲಿ ನೀಡಬೇಕು ಎಂಬ ಕುರಿತು ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗಿದೆ. ನೇಮಕಾತಿಗೆ ಇದ್ದ ನಿರ್ಬಂಧವನ್ನು ತೆರವುಗೊಳಿಸಿದ ಬಳಿಕ ಅಭ್ಯರ್ಥಿಗಳ ವಯೋಮಿತಿಯನ್ನು ಒಂದು ಅವಧಿಗೆ ಹೆಚ್ಚಳ ಮಾಡಲಾಗಿದೆ. ಕೆಇಎಯಲ್ಲಿ ಈಗಾಗಲೇ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಒಳ ಮೀಸಲಾತಿ ಜಾರಿ ಕುರಿತಾಗಿ ಸುಪ್ರೀಂಕೋರ್ಟ್ ನಿರ್ದೇಶನಗಳ ಪ್ರಕಾರ ಕಾಯ್ದೆ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

More articles

Latest article