ಚುನಾವಣಾ ಕೆಲಸಕ್ಕೆ ಶಿಕ್ಷಕರ ನಿಯೋಜನೆ: ಶಿಕ್ಷಕರ ಸಂಘದ ಜತೆ ಸಭೆ ನಡೆಸಿದ ಶಾಲಿನಿ ರಜನೀಶ್

Most read

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಚುನಾವಣಾ ಕಾರ್ಯಗಳಿಗೆ ಶಿಕ್ಷಕರನ್ನು ನೇಮಕ ಮಾಡುತ್ತಿರುವ ವಿಷಯವನ್ನು ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್‌ ನೇತೃತ್ವದಲ್ಲಿ ನಡೆದ ಸಭೆ ತೀರ್ಮಾನಿಸಿದೆ.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಜತೆ ನಡೆದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಯಿತು.

ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯಕ್ಕೆ ಶಿಕ್ಷಕರನ್ನು ನಿಯೋಜಿಸಬಾರದು ಎಂದು ಕೋರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್‌ ಅವರು ರಾಜ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದರು. ಈ ಪತ್ರಕ್ಕೆ ಪ್ರತಿಕ್ರಿಯೆ ನೀಡಿದ್ದ ಕರ್ನಾಟಕದ ಜಂಟಿ ಮುಖ್ಯ ಚುನಾವಣಾಧಿಕಾರಿ ಎಸ್‌. ಯೋಗೇಶ್ವರ ಅವರು ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ನಿಯೋಜಿಸಿರುವ ಶಿಕ್ಷಕರನ್ನು ಸಾರ್ವಜನಿಕ ಹಿತಾಸಕ್ತಿ ಅಡಿಯಲ್ಲಿ ಹಿಂಪಡೆಯಬೇಕು ಎಂಬ ಕೋರಿಕೆ ಪರಿಗಣಿಸಲು ಸಾಧ್ಯವಿಲ್ಲ. ರಜಾ ದಿನಗಳು ಹಾಗೂ ಬೋಧಕೇತರ ಸಮಯದಲ್ಲಿ ಬೋಧಕ ಸಿಬ್ಬಂದಿಯನ್ನು ಚುನಾವಣಾ ಕಾರ್ಯ, ಮತದಾರರ ಪಟ್ಟಿಯ ಪರಿಷ್ಕರಣಾ ಕಾರ್ಯಕ್ಕೆ ನಿಯೋಜನೆ ಮಾಡಲು ಸುಪ್ರೀಂಕೋರ್ಟ್‌ ಕೂಡ ಸಮ್ಮತಿಸಿದೆ. ಭಾರತ ಚುನಾವಣಾ ಅಯೋಗವೂ ಈ ಕುರಿತು ಸುತ್ತೋಲೆ ಹೊರಡಿಸಿದೆ ಎಂದು ತಿಳಿಸಿದ್ದರು.

ಈ ವಿಷಯವನ್ನು ಸಭೆಯಲ್ಲಿ ಪ್ರಸ್ತಾಪಿಸಿದ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ, ಚುನಾವಣಾ ಕಾರ್ಯಗಳಿಗಾಗಿ ಶಿಕ್ಷಕರನ್ನು ಬೂತ್‌ ಮಟ್ಟದ ಅಧಿಕಾರಿಗಳಾಗಿ (ಬಿಎಲ್‌ ಒ) ನೇಮಕ ಮಾಡುವುದರಿಂದ ತರಗತಿ ಪಾಠಗಳಿಗೆ ತೊಂದರೆಯಾಗುತ್ತಿದೆ. ಶಿಕ್ಷಕರನ್ನು ಬೋಧನಾ ಕಾರ್ಯ ಹೊರತುಪಡಿಸಿ ಅನ್ಯ ಕಾರ್ಯಗಳಿಗೆ ಬಳಸಬಾರದು. ಈ ಕುರಿತು ಭಾರತ ಚುನಾವಣಾ ಆಯೋಗಕ್ಕೆ ಪತ್ರ ಬರೆಯಬೇಕು ಎಂದು ಮನವಿ ಮಾಡಿಕೊಂಡರು.

ಸಭೆಯಲ್ಲಿ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್‌, ಆಯುಕ್ತ ಡಾ.ತ್ರಿಲೋಕಚಂದ್ರ, ಸಂಘದ ಅಧ್ಯಕ್ಷ ಕೆ. ನಾಗೇಶ್‌ ಉಪಸ್ಥಿತರಿದ್ದರು.

More articles

Latest article