ಇಂದು ಸಂಜೆ ಹಿರಿಯ ಕಾಂಗ್ರೆಸ್‌ ಮುಖಂಡ, ಶಾಸಕ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ; ಸಿಎಂ, ಡಿಸಿಎಂ ಸೇರಿದಂತೆ ಗಣ್ಯರ ಉಪಸ್ಥಿತಿ

Most read

ದಾವಣಗೆರೆ: ನಿನ್ನೆ ಭಾನುವಾರ ನಿಧನ ಹೊಂದಿದ  ಹಿರಿಯ ಕಾಂಗ್ರಸ್‌ ಮುಖಂಡ, ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ಇಂದು ಸಂಜೆ 5.30ರ ವೇಳೆಗೆ ನಡೆಯಲಿದೆ. ಅವರ ಒಡೆತನದ ಕಲ್ಲೇಶ್ವರ ರೈಸ್‌ ಮಿಲ್‌ ಆವರಣದಲಿ  ವೀರಶೈವ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ.

94 ವರ್ಷದ ಶಾಮನೂರು ಶಿವಶಂಕರಪ್ಪ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾದರು. ದಾವಣಗೆರೆ ದಕ್ಷಿಣ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಅವರು ಅಖಿಲ ಭಾರತ ವೀರಶೈವ ಮಹಾ ಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿದ್ದರು.

ಇವರ ಗೌರವಾರ್ಥ ಇಂದು ದಾವಣಗೆರೆ ನಗರ ವ್ಯಾಪ್ತಿಯ ಎಲ್ಲಾ ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.

ಮಧ್ಯಾಹ್ನದ ನಂತರ ಹೈಸ್ಕೂಲ್ ಮೈದಾನದಲ್ಲಿ ಸಂಜೆ 4ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಅತ್ತ ಬೆಳಗಾವಿಯಲ್ಲಿ ಶಾಮನೂರು ಅವರ ನಿಧನಕ್ಕೆ ವಿಧಾನಂಡಲದ ಉಣಯ ಸದನಗಳಲ್ಲಿ ಸಂತಾಪ ಸೂಚಿಸಿ ನಂತರ ಸದನವನ್ನು ನಾಳೆಗೆ ಮುಂದೂಡಲಾಗಿದೆ. ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರು ಶಾಸಕರು ಭಾಗವಹಿಸಲಿದ್ದಾರೆ. ಮೂರೂ ಪಕ್ಷಗಳ ಶಾಸಕರು ದಾವಣಗೆರೆಯತ್ತ ಆಗಮಿಸುತ್ತಿದ್ದಾರೆ.

ದಾವಣಗೆರೆಯ ಪುರಸಭೆ ಸದಸ್ಯರಾಗಿ ರಾಜಕೀಯ ಪ್ರವೇಶಿಸಿದ ಶಾಮನೂರು ಅವರು ತಮ್ಮ 63ನೇ ವಯಸ್ಸಿನಲ್ಲಿ ಮೊದಲ ಬಾರಿಗೆ 1994ರಲ್ಲಿ ಶಾಸನ ಸಭೆ ಪ್ರವೇಶಿಸಿದ್ದರು. ಒಟ್ಟು 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಒಂದು ಬಾರಿ ಸಂಸತ್ ಸದಸ್ಯರಾಗಿಯೂ ಆಯ್ಕೆಯಾಗಿದ್ದರು. ದಾವಣಗೆರೆ ನಗರ ಮತ್ತು ಜಿಲ್ಲೆಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಮುಂದುವರಿಯಲು ಇವರ ಕೊಡುಗೆ ಅಪಾರವಾಗಿದೆ. ಇವರ ಗೌರವಾರ್ಥ ದಾವಣಗೆರೆ ನಗರದಲ್ಲಿ ಸ್ವಯಂಘೋಷಿತ ಬಂದ್‌ ವಾತಾವರಣ ಕಂಡು ಬರುತ್ತಿದೆ. ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಗೌರವ ಸೂಚಿಸಲಾಗುತ್ತಿದೆ.

ಸಂತಾಪಗಳ ಮಹಾಪೂರ:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಮ್ಮ ಸಂತಾಪದಲ್ಲಿ ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಪಕ್ಷದ ಹಿರಿಯ ನಾಯಕರು ಆದ ಶಾಮನೂರು ಶಿವಶಂಕರಪ್ಪ ಅವರ ನಿಧನವಾರ್ತೆ ನೋವುಂಟುಮಾಡಿದೆ.  ತಮ್ಮ ಸುದೀರ್ಘ ಸಾರ್ವಜನಿಕ ಜೀವನದಲ್ಲಿ ಅಪವಾದ, ಆರೋಪಗಳಿಂದ ದೂರವಿದ್ದು, ಸಿಕ್ಕ ಅಧಿಕಾರವನ್ನು ಜನಕಲ್ಯಾಣಕ್ಕಾಗಿಯೇ ಮುಡುಪಿಟ್ಟಿದ್ದ ಮುತ್ಸದ್ದಿ ನಾಯಕನ ಅಗಲಿಕೆಯಿಂದ ಸಮಾಜ ಬಡವಾಗಿದೆ.

ದಾವಣಗೆರೆ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿಸಿದ ಶಿವಶಂಕರಪ್ಪನವರ ಕಾರ್ಯಗಳು ಅವರನ್ನು ಜನಮಾನಸದಲ್ಲಿ ಚಿರಸ್ಥಾಯಿಯಾಗಿಸಲಿದೆ.  ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಮತ್ತವರ ಕುಟುಂಬಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು. ಸಮಾಜ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಶಿವಶಂಕರಪ್ಪನವರು ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ್ದರು. ಅವರ ಅಗಲಿಕೆಯು ನಾಡಿಗೆ ಹಾಗೂ ಕಾಂಗ್ರೆಸ್‌ ಪಕ್ಷಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬ ವರ್ಗಕ್ಕೆ, ಬೆಂಬಲಿಗರಿಗೆ ಈ ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಸಚಿವರು, ಶಾಸಕರು ಸೇರಿದಂತೆ ಪಕ್ಷ ಭೇದ ಮರೆತು ಕಾಂಗ್ರೆಸ್‌, ಬಿಜೆಪಿ ಜೆಡಿಎಸ್‌ ಮುಖಂಡರು ಶಾಮನೂರು ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ.

More articles

Latest article