ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ನೀಡಿದ್ದ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜುಲೈ 8ರವರೆಗೆ ಅವರನ್ನು ಬಂಧಿಸಿದಂತೆ ಹೈಕೋರ್ಟ್ ಇಂದು ಆದೇಶ ನೀಡಿದೆ.
ಶಾಲಿನಿ ರಜನೀಶ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ರವಿಕುಮಾರ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಗುರುವಾರ ಎಫ್ ಐ ಆರ್ ದಾಖಲಾಗಿತ್ತು. ಜೆಪಿ ನಗರದ ನಂದಾದೀಪ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಎಫ್ ಐಆರ್ ದಾಖಲಿಸಿದ್ದರು.
ಈ ಎಫ್ ಐ ಆರ್ ಅನ್ನು ಪ್ರಶ್ನಿಸಿ ರವಿಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಜುಲೈ 8ರವರೆಗೂ ರವಿಕುಮಾರ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಅಥವಾ ಬಂಧಿಸದಂತೆ ಪೊಲೀಸರಿಗೆ ಸೂಚಿಸಿದೆ.
ರವಿಕುಮಾರ್ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಅರುಣ್ ಶ್ಯಾಮ್, ವಿಧಾನಸೌಧದ ಎದುರು ಪ್ರತಿಭಟನೆ ನಡೆಸುತ್ತಿದ್ದಾಗ ಮುಖ್ಯಮಂತ್ರಿಗಳು ಮತ್ತು ಸರ್ಕಾರ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂಬ ಅರ್ಥದಲ್ಲಿ ರವಿಕುಮಾರ್ ಹೇಳಿಕೆ ನೀಡಿದ್ದಾರೆ. ಆದರೆ ಇದನ್ನು ರಾಜಕೀಯ ಪ್ರೇರಿತವಾಗಿ ನೋಡಲಾಗುತ್ತಿದೆ ಎಂದು ತಿಳಿಸಿದರು.
ವಿಡಿಯೋ ಕ್ಲಿಪ್ ನಲ್ಲಿ ಏನಿದೆ ಎಂದು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಪ್ರಶ್ನಿಸಿದಾಗ ಅರುಣ್ ಶ್ಯಾಮ್ ಅವರು ವಿಡಿಯೋ ಕ್ಲಿಪ್ ಹಾಕಿ ತೋರಿಸಿದರು. ಆದರೆ ಇದಕ್ಕೆ ಎಸ್ ಪಿಪಿ ಬಿ.ಎ.ಬೆಳ್ಳಿಯಪ್ಪ ಆಕ್ಷೇಪ ವ್ಯಕ್ತಪಡಿಸಿ ಅರ್ಜಿದಾರರು ಸಲ್ಲಿಸಿದ ಈ ವಿಡಿಯೋ ಕ್ಲಿಪ್ ಅನ್ನು ಪರಿಗಣಿಸಬಾರದು ಎಂದು ತಿಳಿಸಿದರು.