ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಿಗ್ಗೆ ಸುಪ್ರೀಂಕೋರ್ಟ್ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಅವರ ಮನೆಗೆ ತೆರಳಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಅಭಿಷೇಕ್ ಅವರು ಕಾಂಗ್ರೆಸ್ನ ರಾಜ್ಯಸಭಾ ಸದಸ್ಯರಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಕುಟುಂಬದ ವಿರುದ್ಧ ಕೇಳಿಬಂದಿರುವ ಮುಡಾ ಪ್ರಕರಣದಲ್ಲಿ ಅವರು ವಾದ ಮಂಡಿಸಿದ್ದರು.
ಇತ್ತೀಚೆಗೆ ಅಭಿಷೇಕ್ ಮನುಸಿಂಘ್ವಿ ಅವರ ಸಲಹೆ ಮೇರೆಗೆ ಸಿದ್ದರಾಮಯ್ಯ ಅವರ ಕುಟುಂಬ ನಿವೇಶನಗಳನ್ನು ಮುಡಾಗೆ ಮರಳಿಸಿತ್ತು. ಇದೇ ಪ್ರಕರಣದಲ್ಲಿ ರಾಜ್ಯಪಾಲರ ಅನುಮತಿ ಪಡೆದು ಪ್ರಕರಣ ದಾಖಲಾಗಿದ್ದು, ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಈ ಮಧ್ಯೆ ಲೋಕಾಯುಕ್ತದಿಂದ ನ್ಯಾಯ ಸಿಗುವುದಿಲ್ಲ. ಆದ್ದರಿಂದ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಸ್ನೇಹಮಯಿ ಕೃಷ್ಣ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಒಂದು ವೇಳೆ ಹೈಕೋರ್ಟ್ ಸಿಬಿಐ ತನಿಖೆಗೆ ಹಸಿರು ನಿಶಾನೆ ತೋರಿಸಿದರೆ ಅದನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿ ತಡೆ ಪಡೆದುಕೊಳ್ಳುವ ಸಾಧ್ಯತೆಗಳ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಜಾರಿ ನಿರ್ದೇಶನಾಲಯ ವಿಚಾರಣೆಗೆ ನೋಟಿಸ್ ನೀಡಿದರೆ ಅನುಸರಿಸಬೇಕಾದ ಕ್ರಮಗಳ ಬಗ್ಗೆಯೂ ಸಿದ್ದರಾಮಯ್ಯ ಅವರು ಅಭಿಷೇಕ್ ಮನುಸಿಂಘ್ವಿ ಅವರಿಂದ ಸಲಹೆ ಪಡೆದುಕೊಂಡರು ಎಂದು ತಿಳಿದುಬಂದಿದೆ.