ಬೆಂಗಳೂರು: ಬಿ.ಆರ್.ಅಂಬೇಡ್ಕರ್ ಮತ್ತು ದಲಿತರ ವಿರುದ್ಧ ಆಕ್ಷೇಪಾರ್ಹ ಕಿರು ನಾಟಕ (ಸ್ಕಿಟ್) ಪ್ರದರ್ಶಿಸಿದ ಆರೋಪದಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಎಸ್ ಸಿ- ಎಸ್ ಟಿ) ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅನುಸಾರ ಬೆಂಗಳೂರು ಜೈನ್ ಯೂನಿವರ್ಸಿಟಿ ಸೆಂಟರ್ ಫಾರ್ ಮ್ಯಾನೇಜ್‌ಮೆಂಟ್ ಸ್ಟಡೀಸ್ ವಿದ್ಯಾರ್ಥಿಗಳೂ ಸೇರಿದಂತೆ ಏಳು ಜನರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ಈ ಸಂಬಂಧ ವಿಭಾಗದ ನಿರ್ದೇಶಕ ದಿನೇಶ್ ನೀಲಕಂಠ ಬೋರ್ಕರ್ ಸೇರಿದಂತೆ ಇತರರು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್. ಆರ್ .ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ.
ಅರ್ಜಿದಾರರ ವಿರುದ್ಧ ಆರೋಪಿಸಲಾಗಿರುವ ಅಪರಾಧಗಳ ಮೂಲ ಅಂಶಗಳನ್ನು ಎಫ್‌ಐಆರ್ ಸ್ಪಷ್ಟವಾಗಿ ಬಿಂಬಿಸುವುದಿಲ್ಲ ಎಂದು ಹೇಳಿರುವ ನ್ಯಾಯಪೀಠ, ಅರ್ಜಿದಾರರು ಪ್ರದರ್ಶಿಸಿದ ಕಿರು ನಾಟಕ ವಿಡಂಬನೆ ಮತ್ತು ಮನರಂಜನೆಯ ಸ್ವರೂಪ ಹೊಂದಿದೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಖಾತರಿಪಡಿಸುತ್ತದೆ ಮತ್ತು ಇದಕ್ಕೆ ಸಂವಿಧಾನದ 19ನೇ ವಿಧಿಯಡಿ ರಕ್ಷಣೆ ಇದೆ ಎಂದೂ ಸ್ಪಷ್ಟಪಡಿಸಿದೆ.
ಎಸ್ ಸಿ–ಎಸ್ ಟಿ ಸಮುದಾಯದ ಸದಸ್ಯರನ್ನು ಅವಮಾನಿಸುವ ಉದ್ದೇಶದಿಂದ ಅರ್ಜಿದಾರರು ಸಾರ್ವಜನಿಕವಾಗಿ ಯಾವುದೇ ಸ್ಥಳದಲ್ಲಿ ನಾಟಕ ಪ್ರದರ್ಶಿಸಿಲ್ಲ. ಸಮುದಾಯವನ್ನು ಉದ್ದೇಶಪೂರ್ವಕವಾಗಿ ಅವಹೇಳನ ಮಾಡಿಲಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಆದಾಗ್ಯೂ, ಎಸ್ಸಿ–ಎಸ್ ಟಿ ಸಮುದಾಯದ ಯಾವೊಬ್ಬ ವ್ಯಕ್ತಿಯೂ ದೂರು ದಾಖಲಿಸಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.
ಕಾಲೇಜು ವತಿಯಿಂದ ನಗರದ ನಿಮ್ಹಾನ್ಸ್ ಸಭಾಂಗಣದಲ್ಲಿ 2023ರ ಫೆಬ್ರುವರಿ 8ರಂದು ಯುವಜನೋತ್ಸವ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮೀಸಲು ವ್ಯವಸ್ಥೆ ಕುರಿತು ವಿಡಂಬನಾತ್ಮಕ ಕಿರು ನಾಟಕ (ಮ್ಯಾಡ್- ಆ್ಯಡ್ ಸ್ಕಿಟ್) ಪ್ರದರ್ಶಿಸಿದ್ದರು. ನಾಟಕದಲ್ಲಿ ಬಿ.ಆರ್. ಅಂಬೇಡ್ಕರ್ ಮತ್ತು ದಲಿತರ ಬಗ್ಗೆ ಆಕ್ಷೇಪಾರ್ಹ ಸಂಭಾಷಣೆ ಬಳಸಲಾಗಿದೆ ಎಂದು ಆರೋಪಿಸಲಾಗಿತ್ತು.