ಬೆಂಗಳೂರು: ಕೊಳಚೆ ನಿವಾಸಿಗಳ ಮೇಲಿನ ಸಾಮಾಜಿಕ ಮತ್ತು ಅಭಿವೃದ್ಧಿ ತಾರತಮ್ಯ ವಿರೋಧಿಸಿ ಹಾಗೂ 2025-26 ನೇ ಸಾಲಿನ ಬಜೆಟ್‌ನಲ್ಲಿ ಕೊಳಚೆ ನಿವಾಸಿಗಳ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನಲ್ಲಿ ಅನುದಾನ ನಿಗದಿಪಡಿಸಬೇಕು ಎಂದು ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಸಾವಿತ್ರಿಬಾಯಿಪುಲೆ ಮಹಿಳಾ ಸಂಘಟನೆ ಆಶ್ರಯದಲ್ಲಿ ಪ್ರತಿಭಟನೆ ನಡೆಯಿತು. ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಸ್ಲಂ ನಿವಾಸಿಗಳು ಭಾಗವಹಿಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಪಡಿಸಿದರು.
2023ರ ವಿಧಾನ ಸಭಾ ಚುನಾವಣೆಯಲ್ಲಿ ಭರವಸೆ ನೀಡಿದ್ದಂತೆ ಕೊಳಚೆ ನಿವಾಸಿಗಳಿಗೆ ಪ್ರತ್ಯೇಕ ಸಚಿವಾಲಯ ಮತ್ತು ನಗರ ಉದ್ಯೋಗ ಖಾತ್ರಿ, ನಿವೇಶನ ರಹಿತರಿಗೆ ವಸತಿ ಕಲ್ಪಿಸುವ ಭೂ ಬ್ಯಾಂಕ್ ಯೋಜನೆಯನ್ನು ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು. ಸರ್ಕಾರದ ಪರವಾಗಿ ಕೊಳಚೆ ನಿರ್ಮೂಲನಾ ಮಂಡಲಿ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ ಮತ್ತು ಆಯುಕ್ತ ಡಾ. ಅಶೋಕ್ ಮನವಿ ಸ್ವೀಕರಿಸಿದರು.
ರಾಜ್ಯದ ನಗರ ಜನಸಂಖ್ಯೆಯಲ್ಲಿ ಶೇ.40 ರಷ್ಟು ಮಂದಿ ಸ್ಲಂ ನಿವಾಸಿಗಳಾಗಿದ್ದು, ಪರಿಶಿಷ್ಟ ಜಾತಿ/ಪಂಗಡ ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಅಲೆಮಾರಿ ಸಮುದಾಯಗಳಿಗೆ ಸೇರಿದವರಾಗಿದ್ದಾರೆ. ಕೊಳಗೇರಿಗಳಲ್ಲಿ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು,ರಸ್ತೆ, ಚರಂಡಿ ಬೀದಿ ದೀಪ, ಶೌಚಾಲಯ ಮೊಲಾದ ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಪಡಿಸಿದರು.
ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಕಾಯಿದೆಯನ್ನು ತಿದ್ದುಪಡಿ ಮಾಡಬೇಕು. ಸ್ಲಂ ನಿವಾಸಿಗಳ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಪ್ರತ್ಯೇಕ ಸಚಿವಾಲಯವನ್ನು ಘೋಷಿಸಬೇಕು. ಸ್ಲಂ ಜನರ ಆರ್ಥಿಕ ಅಭಿವೃದ್ಧಿ ಮತ್ತು ಜೀವನೋಪಾಯಕ್ಕಾಗಿ ನಗರ ಉದ್ಯೋಗ ಖಾತ್ರಿ ಯೋಜನೆಯನ್ನು ಜಾರಿಗೊಳಿಸಬೇಕು. ನಿವೇಶನ ರಹಿತರಿಗೆ ಚಿತ್ರದುರ್ಗ ಘೋಷಣೆಯಂತೆ ವಸತಿ ಕಲ್ಪಿಸಲು 2017-18ರ ಬಜೆಟ್ ಘೋಷಣೆಯಂತೆ ನಗರ ಲ್ಯಾಂಡ್ ಬ್ಯಾಂಕ್ ಯೋಜನೆಯನ್ನು ಜಾರಿಗೊಳಿಸಬೇಕು. ಪ್ರಧಾನಮಂತ್ರಿ ಆವಾಸ್ ಯೋಜನೆ ಫಲಾನುಭವಿ ಶುಲ್ಕವನ್ನು ಎಸ್‌ಸಿ/ಎಸ್‌ಟಿಗಳಿಗೆ ಉಚಿತ ಇತರೆ ಸಮುದಾಯಗಳಿಗೆ 25 ಸಾವಿರ ಪಾವತಿಸಲು ಅವಕಾಶ ಕಲ್ಪಿಸಬೇಕು. ಬೆಂಗಳೂರು ಸ್ಲಂ ನಿವಾಸಿಗಳ ಪುನರ್‌ವಸತಿಗಾಗಿ ಭೂ ಮಂಜೂರಾತಿ ನೀಡಬೇಕು ಹಾಗೂ ನೆಲಬಾಡಿಗೆ ಸ್ಲಂಗಳಿಗೆ ನೀತಿಯನ್ನು ರೂಪಿಸಬೇಕು ಎಂಬ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದರು.
ಸಾವಿತ್ರಿ ಬಾಯಿ ಪುಲೆ ಮಹಿಳಾ ಸಂಘಟನೆಯ ಚಂದ್ರಮ್ಮ, ಮತ್ತು ಸ್ಲಂ ಜನಾಂದೋಲನ ಸಂಘಟನೆಯ ರಾಜ್ಯ ಸಂಚಾಲಕ ಎ.ನರಸಿಂಹಮೂರ್ತಿ ಅವರು ಪರತಿಭಟನೆಯ ನೇತೃತ್ವ ವಹಿಸಿದ್ದರು.