ಬೆಂಗಳೂರು: ರಾಜ್ಯ ಸರ್ಕಾರವು ಉರ್ದು ಹಬ್ಬಕ್ಕೆ ಆದ್ಯತೆ ನೀಡುವ ಬದಲು, ಉರ್ದು ಮಾಧ್ಯಮ ಶಾಲೆಗಳಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸಿ, ವರ್ಷಗಳಿಂದ ಉದ್ಯೋಗಕ್ಕಾಗಿ ಕಾಯುತ್ತಿರುವ ಅರ್ಹ ಶಿಕ್ಷಕ ಆಕಾಂಕ್ಷಿಗಳಿಗೆ ಉದ್ಯೋಗದ ಅಧಿಸೂಚನೆ ಹೊರಡಿಸುವ ಮೂಲಕ ನ್ಯಾಯ ಒದಗಿಸಬೇಕು ಎಂದು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಆಗ್ರಹಿಸಿದೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ರಾಜ್ಯಾಧ್ಯಕ್ಷರಾದ ಡಾ. ನಸೀಂ ಅಹ್ಮದ್, ರಾಜ್ಯದಲ್ಲಿ ಉರ್ದು ಮಾಧ್ಯಮ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಹುಕಾಲದಿಂದ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವು 800 ಉರ್ದು ಹಾಗೂ 200 ಮರಾಠಿ ಮಾಧ್ಯಮ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಭರವಸೆ ನೀಡಿತ್ತು. ಈ ನಿರ್ಧಾರದಿಂದ ಸಾವಿರಾರು ಅರ್ಹ ಅಭ್ಯರ್ಥಿಗಳಲ್ಲಿ ಉದ್ಯೋಗದ ನಿರೀಕ್ಷೆ ಮೂಡಿತ್ತು. ಆದರೆ ಇದೀಗ ಕೇವಲ 300+ ಹುದ್ದೆಗಳ ನೇಮಕಾತಿಗೆ ಅನುಮೋದನೆ ದೊರೆತಿದೆ ಎಂಬ ವರದಿಗಳು ಆತಂಕಕ್ಕೆ ಕಾರಣವಾಗಿವೆ. ಸರ್ಕಾರದ ಇಂತಹ ನಡೆ ಅರ್ಹ ಅಭ್ಯರ್ಥಿಗಳ ನಿರೀಕ್ಷೆಗೆ ಧಕ್ಕೆಯುಂಟು ಮಾಡುವುದರ ಜೊತೆಗೆ, ಉರ್ದು ಮಾಧ್ಯಮ ಶಾಲೆಗಳಲ್ಲಿ ಇರುವ ವಾಸ್ತವಿಕ ಶಿಕ್ಷಕರ ಕೊರತೆಯನ್ನು ಪರಿಹರಿಸುವುದಿಲ್ಲ. ಆದ್ದರಿಂದ ಸರ್ಕಾರವು ತನ್ನ ಹಿಂದಿನ ಭರವಸೆಯಿಂದ ಹಿಂದೆ ಸರಿಯದೆ 800 ಉರ್ದು ಶಿಕ್ಷಕರ ನೇಮಕಾತಿಗೆ ಸಂಪೂರ್ಣ ಅನುಮೋದನೆ ನೀಡಿ, ತಕ್ಷಣವೇ ಅಧಿಕೃತ ನೇಮಕಾತಿ ಅಧಿಸೂಚನೆ ಹೊರಡಿಸಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಉರ್ದು ಮಾಧ್ಯಮ ಶಾಲೆಗಳ ಸಂಖ್ಯೆಯೇ ಗಣನೀಯವಾಗಿದ್ದು, ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಶಿಕ್ಷಕರ ಕೊರತೆಯಿಂದ ಬಳಲುತ್ತಿರುವ ಉರ್ದು ಮಾಧ್ಯಮ ಶಾಲೆಗಳಲ್ಲಿ ಖಾಲಿ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಬೇಕು. ಉರ್ದು ಸೇರಿದಂತೆ ಎಲ್ಲಾ ಭಾಷಾ ಅಲ್ಪಸಂಖ್ಯಾತರ ಶಾಲೆಗಳ ಶಿಕ್ಷಕರ ನೇಮಕಾತಿಯನ್ನು ಸಾಮಾನ್ಯ ನೇಮಕಾತಿ ಪ್ರಕ್ರಿಯೆಯ ಅವಿಭಾಜ್ಯ ಭಾಗವನ್ನಾಗಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
“ಉರ್ದು ಭಾಷೆಯ ಮೇಲಿನ ಪ್ರೀತಿ ಕೇವಲ ಉರ್ದು ಹಬ್ಬ ಆಚರಿಸುವುದರಿಂದ ಸಾಬೀತಾಗುವುದಿಲ್ಲ. ಕರ್ನಾಟಕದಲ್ಲಿ ಒಟ್ಟು 4236 ಉರ್ದು ಮಾಧ್ಯಮ ಶಾಲೆಗಳಿದ್ದು, 3 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಉರ್ದು ಮಾಧ್ಯಮದಲ್ಲಿ ಓದುತ್ತಿರುವ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಅರ್ಹ ಉರ್ದು ಶಿಕ್ಷಕ ಆಕಾಂಕ್ಷಿಗಳಿಗೆ ಉದ್ಯೋಗ ಒದಗಿಸುವ ಮೂಲಕ ಸರ್ಕಾರ ತನ್ನ ಬದ್ಧತೆಯನ್ನು ಸಾಬೀತುಪಡಿಸಬೇಕು” ಎಂದು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ತಿಳಿಸಿದೆ.

