ಬೆಂಗಳೂರು : “ಈವರೆಗೆ 625 ಅಂಕಗಳ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ 100 ಅಂಕಗಳನ್ನು ನಿಗದಿಪಡಿಸಲಾಗಿತ್ತು. ಇನ್ಮುಂದೆ ತೃತೀಯ ಭಾಷೆಯಲ್ಲಿ ಪಾಸ್ ಅಥವಾ ಫೇಲ್ ಎಂಬ ಪದ್ಧತಿ ಇರುವುದಿಲ್ಲ. ಅಂದರೆ, ಅಂತಿಮ ಫಲಿತಾಂಶದ ಅಂಕಗಳಿಗೆ ತೃತೀಯ ಭಾಷೆಯ ಅಂಕಗಳನ್ನು ಪರಿಗಣಿಸಲಾಗುವುದಿಲ್ಲ. ಬದಲಾಗಿ ಗ್ರೇಡಿಂಗ್ (ಉದಾಹರಣೆಗೆ: ಎ, ಬಿ, ಸಿ, ಡಿ) ನೀಡಲಾಗುತ್ತದೆ,” ಎಂದು ಸಚಿವರು ಸ್ಪಷ್ಟಪಡಿಸಿದರು.
ಹಿಂದಿ, ಸಂಸ್ಕೃತ, ತುಳು, ಮರಾಠಿ, ಅರೇಬಿಕ್ ಸೇರಿದಂತೆ ಪಠ್ಯಕ್ರಮದಲ್ಲಿರುವ ಎಲ್ಲಾ ತೃತೀಯ ಭಾಷೆಗಳಿಗೂ ಈ ನಿಯಮ ಅನ್ವಯವಾಗಲಿದೆ. ಅಧಿಕೃತ ಆದೇಶವನ್ನು ಶೀಘ್ರದಲ್ಲೇ ಹೊರಡಿಸಲಾಗುವುದು ಎಂದು ತಿಳಿಸಿದರು.
ಬೆಂಗಳೂರು: ರಾಜ್ಯದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಮೇಲಿನ ಶೈಕ್ಷಣಿಕ ಒತ್ತಡವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಅವರು ಇಂದು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ.
ವಿಧಾನಸಭಾ ಅಧಿವೇಶನದ ಮುಕ್ತಾಯದ ಬಳಿಕ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇನ್ಮುಂದೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳಲ್ಲಿ ‘ತೃತೀಯ ಭಾಷೆ’ಯನ್ನು ಗ್ರೇಡಿಂಗ್ ವ್ಯವಸ್ಥೆಗೆ ಒಳಪಡಿಸಲಾಗುವುದು ಎಂದು ಹೇಳಿದರು.
ಮಕ್ಕಳಿಗೆ ‘ನೈತಿಕ ಶಿಕ್ಷಣ’ ಜಾರಿ: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಸರ್ಕಾರದಿಂದಲೇ ಉಚಿತವಾಗಿ ‘ನೈತಿಕ ಶಿಕ್ಷಣ’ ಪುಸ್ತಕಗಳನ್ನು ಒದಗಿಸಲಾಗುತ್ತಿದೆ. ಇದು ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ರೂಪಿಸುವ ಸರ್ಕಾರದ ಹೆಜ್ಜೆಯಾಗಿದೆ, ಎಂದು ಹೇಳಿದರು.
16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ: ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ನಿರ್ಬಂಧಿಸುವ ಮಹತ್ವದ ಪ್ರಸ್ತಾಪವನ್ನು ಸದನದಲ್ಲಿ ಚರ್ಚಿಸಲಾಗಿದ್ದು, ಎಲ್ಲರಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಈ ಸಮಸ್ಯೆಯು ಕೇವಲ ಸರ್ಕಾರದ ಮಟ್ಟದಲ್ಲಿ ಬಗೆಹರಿಯುವುದಿಲ್ಲ, ಪೋಷಕರು ತಮ್ಮ ಮಕ್ಕಳ ಮೊಬೈಲ್ ಬಳಕೆಯ ಮೇಲೆ ಹೆಚ್ಚಿನ ಜವಾಬ್ದಾರಿ ವಹಿಸಬೇಕು ಎಂದು ಸಚಿವರು ಕಳಕಳಿಯ ಮನವಿ ಮಾಡಿದರು.
ನಮ್ಮ ಸರ್ಕಾರದ ಪ್ರಮುಖ ಉದ್ದೇಶ ಸರ್ಕಾರಿ ಶಾಲೆಗಳ ಸಬಲೀಕರಣ, ಪಾರದರ್ಶಕತೆ ಕಾಯ್ದುಕೊಳ್ಳುವುದು ಮತ್ತು ವಿದ್ಯಾರ್ಥಿಗಳನ್ನು ಪರೀಕ್ಷಾ ಒತ್ತಡದಿಂದ ಮುಕ್ತಗೊಳಿಸುವುದಾಗಿದೆ. ಈ ನಿಟ್ಟಿನಲ್ಲಿ ವಾರ್ಷಿಕ 3 ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಅಂಕ ಉಳಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಅವರು ತಮ್ಮ ಇಲಾಖೆಯ ಸಾಧನೆ ಮತ್ತು ಮುಂದಿನ ಗುರಿಗಳ ಬಗ್ಗೆ ವಿವರಿಸಿದರು.

