ಶ್ರೀಕಾಕುಲಂ: ಆಂಧ್ರ ಪ್ರದೇಶದ ಶ್ರೀಕಾಕುಲಂ ಜಿಲ್ಲೆಯಲ್ಲಿರುವ ಕಾಶಿಬುಗ್ಗ ವೆಂಕಟೇಶ್ವರ ದೇವಸ್ಥಾನದಲ್ಲಿ ಇಂದು ಕಾಲ್ತುಳಿತ ಸಂಭವಿಸಿ ಸುಮಾರು 12 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕಾಶಿಬುಗ್ಗ ವೆಂಕಟೇಶ್ವರ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ 11.30ರ ಸುಮಾರಿಗೆ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ 12 ಮಂದಿ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾವು ನೋವು ಕುರಿತು ಖಚಿತ ಮಾಹಿತಿ ಲಭ್ಯವಾಗಿಲ್ಲ. ಆದರೆ ಇದುವರೆಗೂ 9 ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ.
ಈ ದೇವಾಲಯವನ್ನು ಸಂಪೂರ್ಣವಾಗಿ ಖಾಸಗಿಯವರೇ ನಿರ್ವಹಿಸುತ್ತಿದ್ದು, ಕಾರ್ತೀಕ ಏಕಾದಶಿ ಅಂಗವಾಗಿ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ದೇವಸ್ಥಾನಕ್ಕೆ ಅಂದಾಜು 3000 ಭಕ್ತರು ಮಾತ್ರ ಪ್ರವೇಶಿಸುವ ಅವಕಾಶವಿದ್ದು ಸುಮಾರು 25000 ಭಕ್ತರು ಸೇರಿದ್ದರಿಂದ ಈ ಅವಘಡ ಸಂಭವಿಸಿದೆ.
ಈ ದುರಂತ ಕುರಿತು ‘ಎಕ್ಸ್’ನಲ್ಲಿ ಸಂತಾಪ ಸೂಚಿಸಿರುವ ಅಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಕಾಶಿಬುಗ್ಗ ವೆಂಕಟೇಶ್ವರ ದೇವಸ್ಥಾನದಲ್ಲಿ ಸಂಭವಿಸಿದ ಕಾಲ್ತುಳಿತವು ನನಗೆ ಅತೀವ ನೋವನ್ನುಂಟು ಮಾಡಿದೆ. ಈ ದುರಂತದಲ್ಲಿ ಭಕ್ತರು ಅಸುನೀಗಿದ್ದು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

