ಮಹಾಕುಂಭನಗರ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು, ಪ್ರತಿದಿನ ಲಕ್ಷಾಂತರ ಭಕ್ತರು ಪವಿತ್ರ ಸ್ನಾನ ಕೈಗೊಳ್ಳುತ್ತಿದ್ದಾರೆ. ಈ ನಡುವೆ ಇಂದು ಮೌನಿ ಅಮಾವಾಸ್ಯೆ ಇರುವ ಕಾರಣ ಎರಡನೇ ಅಮೃತ ಸ್ನಾನ ಕೈಗೊಳ್ಳಲು ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದು, ಕಾಲ್ತುಳಿತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಈ ದುರಂತದಲ್ಲಿ ಹಲವರು ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಲ್ತುಳಿತದಲ್ಲಿ ಭಕ್ತರು ಅಸುನೀಗಿದ್ದಾರೆಯೇ ಎಂಬ ವಿಷಯ ಖಚಿತವಾಗಿಲ್ಲ.
ಮಹಾಕುಂಭ ನಗರದ ತ್ರಿವೇಣಿ ಮಾರ್ಗ, ಕಾಳಿ ಮಾರ್ಗ ಸೇರಿದಂತೆ ಸಂಗಮದ ಸುತ್ತಮುತ್ತಲಿನ ರಸ್ತೆಗಳು ಲಕ್ಷಾಂತರ ಭಕ್ತರಿಂದ ತುಂಬಿ ತುಳುಕುತ್ತಿವೆ. ಹೀಗಾಗಿ ಜನರ ನಿಯಂತ್ರಣಕ್ಕೆ ಅಧಿಕಾರಿಗಳು ಮತ್ತು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಭಕ್ತರ ಓಡಾಟಕ್ಕೆ ಅನುಕೂಲವಾಗುವಂತೆ ಈ ಪ್ರದೇಶಗಳಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ವಿವಿಧ ರಾಜ್ಯ, ದೇಶಗಳಿಂದ ಬರುವ ವಾಹನಗಳಿಗೆ ನಗರದ ಹೊರವಲಯದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಜನರನ್ನು ನಿಯಂತ್ರಿಸಲು ಸಂಗಮದ ಸುತ್ತಮುತ್ತಲಿನ ರಸ್ತೆಗಳಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದೆ ಎಂದು ವರದಿಗಳು ತಿಳಿಸಿದೆ.
ಮೌನಿ ಅಮಾವಾಸ್ಯೆ ಹಿನ್ನೆಲೆ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಕುಂಭಮೇಳ ನಡೆಯುವ ಪ್ರಯಾಗ್ ರಾಜ್ ನಲ್ಲಿ ಐದು ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಇಂಟಿಗ್ರೇಟೆಡ್ ಕಂಟ್ರೋಲ್ ಮತ್ತು ಕಮಾಂಡ್ ಸೆಂಟರ್ ಸಂಗಮದ ಬಳಿ ನಿಗಾ ಇರಿಸಲಿದೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಎರಡು ದಿನಗಳಿಂದ 3 ಕೋಟಿ ಭಕ್ತರು ಸಂಗಮದಲ್ಲಿ ಪವಿತ್ರ ಸ್ನಾನ ಕೈಗೊಂಡಿದ್ದಾರೆ. ಮಂಗಳವಾರ ರಾತ್ರಿಯಿಂದಲೇ ಮೌನಿ ಅಮಾವಾಸ್ಯೆಯ ಅಮೃತ ಸ್ನಾನ ಆರಂಭವಾಗಲಿದೆ ಎಂದೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗಾಯಗೊಂಡವರನ್ನು ಕರೆದೊಯ್ಯುವಾಗ ಆಂಬ್ಯುಲೆನ್ಸ್ಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ವರದಿಯಾಗಿದೆ. ತ್ರಿವೇಣಿ ಸಂಗಮಕ್ಕೆ ಹೋಗುವ ಮತ್ತು ಹೊರಡುವ ಮಾರ್ಗಗಳನ್ನು ಪ್ರತ್ಯೇಕಿಸಲಾಗಿಲ್ಲದಿರುವುದೇ ದುರಂತಕ್ಕೆ ಕಾರಣವಾಗಿದೆ.