ಜಮ್ಮುಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ; ಆಗಸ್ಟ್ 8 ರಂದು ಸುಪ್ರೀಂಕೋರ್ಟ್ ವಿಚಾರಣೆ

Most read

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಮರಳಿ ರಾಜ್ಯ ಸ್ಥಾನಮಾನವನ್ನು ನೀಡುವಂತೆ ಆಗ್ರಹಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಆಗಸ್ಟ್ 8 ರಂದು ನಡೆಯಲಿದೆ. ಅರ್ಜಿದಾರರಾದ ಜಹೂರ್ ಅಹ್ಮದ್ ಭಟ್ ಮತ್ತು ಕಾರ್ಯಕರ್ತ ಖುರ್ಷೈದ್ ಅಹ್ಮದ್ ಮಲಿಕ್ ಪರವಾಗಿ ಹಾಜರಾದ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ವಿಚಾರಣೆಗೆ ಮನವಿ ಮಾಡಿಕೊಂಡರು.

ಕಳೆದ ವರ್ಷ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲೇ ಈ ಅರ್ಜಿಯನ್ನು ಸಲ್ಲಿಸಲಾಗಿತ್ತು. ರಾಜ್ಯ ಸ್ಥಾನಮಾನ ಮರುಸ್ಥಾಪಿಸದೇ ಇರುವುದರಿಂದ ಕಾಶ್ಮೀರದ ಜನರ ಹಕ್ಕುಗಳ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿದೆ. ರಾಜ್ಯದ ಸ್ಥಾನಮಾನ ನೀಡುವ ಮೊದಲೇ ಚುನಾವಣೆ ನಡೆಸಿ ಶಾಸಕಾಂಗ ಸಭೆ ರಚಿಸಲು ಹೊರಡುವುದು ಒಕ್ಕೂಟ ವ್ಯವಸ್ಥೆಯ ಪರಿಕಲ್ಪನೆಯನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿತ್ತು.

ನ್ಯಾಷನಲ್‌ ಕಾನ್ಫರೆನ್ಸ್‌  ಒಕ್ಕೂಟ ಸರ್ಕಾರ ಪ್ರಸ್ತುತ ಕಾಶ್ಮೀರದಲ್ಲಿ ಅಧಿಕಾರ ನಡೆಸುತ್ತಿದೆ. ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿ ಕೆಲ ವರ್ಷಗಳ ಹಿಂದೆ ರದ್ದಾಗಿ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ರೂಪಿಸಲಾಗಿತ್ತು. ಅದೇ ರಾಜ್ಯದಿಂದ ಲಡಾಖ್‌ ಪ್ರದೇಶವನ್ನು ಮತ್ತೊಂದು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಲಾಗಿತ್ತು.

370 ನೇ ವಿಧಿಯನ್ನು ಎತ್ತಿಹಿಡಿದು ಡಿಸೆಂಬರ್ 2023ರಲ್ಲಿ ತಾನು ನೀಡಿದ್ದ ತೀರ್ಪನ್ನು ಮರುಪರಿಶೀಲಿಸಲು ಕೋರಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಮೇ 2024ರಲ್ಲಿ ವಜಾಗೊಳಿಸಿತ್ತು. ಈ ಪ್ರದೇಶಕ್ಕೆ ಮರಳಿ ರಾಜ್ಯದ ಸ್ಥಾನಮಾನ ನೀಡಲಾಗುವುದು ಎಂದಿದ್ದ ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಹೇಳಿಕೆಯನ್ನು ನ್ಯಾಯಾಲಯ ಆಗ ದಾಖಲಿಸಿಕೊಂಡಿತ್ತು.

More articles

Latest article