ಹುಬ್ಬಳ್ಳಿ: ಮೊದಲು ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕಿವಿ ಮಾತು ಹೇಳಿದರು. ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಅವರು ಮಾತನಾಡಿದರು.
ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ ಎಂದೂ ಯಾರಿಗೂ ಕೇಳಿಲ್ಲ. ನಿಮ್ಮಿಂದ ನನಗೆ ಏನೇನೂ ಅಪೇಕ್ಷೆ ಇಲ್ಲ. ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ ಎಂದರು.
ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದೇ ಏನ್ ದೊಡ್ಡ ದೊಡ್ಡ ಚರ್ಚೆ ನಡೆಸಿದರು. ಆ ಚರ್ಚೆಯಲ್ಲಿ ಜ್ಯೋತಿಷಿಗಳು, ಚಾನಲ್ ಗಳು ತೋರಿಸಿದ್ದೆಲ್ಲಾ ಅಪ್ಪಟ ಸುಳ್ಳಾಯ್ತು. ನೀವು ಹೀಗೆಲ್ಲಾ ತೋರಿಸಿದರೆ ಜನ ಒಪ್ತಾರಾ ಯೋಚನೆ ಮಾಡಿ ಎಂದರು. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ನಮ್ಮ ಸರ್ಕಾರ ಸದಾ ಸಿದ್ದ. ಯಾವತ್ತೂ ಇದಕ್ಕೆ ಧಕ್ಕೆ ತರುವ ಕೆಲಸವನ್ನು ನಾನೂ ಯಾವತ್ತೂ ಮಾಡಿಲ್ಲ, ನಮ್ಮ ಸರ್ಕಾರವೂ ಮಾಡುವುದಿಲ್ಲ ಎಂದರು.