ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರ ಆರೋಪಗಳಿಗೆ ತಕ್ಕ ಎದಿರೇಟು ನೀಡುವಂತೆ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಪರವಾಗಿ ನಿಲ್ಲುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವಸಂಪುಟದ ಸಹದ್ಯೋಗಿಗಳಿಗೆ ಸೂಚನೆ ನೀಡಿದ್ದಾರೆ.
ಗುರುವಾರ ಸಂಜೆ ನಡೆದ ಸಂಪುಟ ಸಭೆಯಲ್ಲಿ ಪ್ರಿಯಾಂಕ್ ಖರ್ಗೆ ಅವರ ವಿಚಾರವೂ ಚರ್ಚೆಗೆ ಬಂದಿದೆ. ಬಿಜೆಪಿ ಕೇವಲ ರಾಜಕಾರಣಕ್ಕಾಗಿ ಆರೋಪ ಮಾಡುತ್ತಿದೆ. ಖರ್ಗೆ ಯೌುದೇ ತಪ್ಪೆಸಗಿಲ್ಲ. ಆದ್ದರಿಂದ ಎಲ್ಲ ಸಚಿವರೂ ಬಿಜೆಪಿ ಆರೋಪಗಳಿಗೆ ತಕ್ಕ ಉತ್ತರ ನೀಡಬೇಕು ಎಂದು ಸಿಎಂ ಸಲಹೆ ನೀಡಿದ್ದಾರೆ.
ಇನ್ನು ಸಂಪುಟ ಸಭೆಯಲ್ಲಿ ಬಿಜೆಪಿ ನಾಯಕರ ಮೇಲಿನ ಪ್ರಕರಣಗಳ ದಾಖಲೆಗಳನ್ನು ಸಚಿವರುಗಳಿಗೆ ಹಂಚಲಾಗಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಬಿಜೆಪಿ ನಾಯಕರ ರಾಜೀನಾಮೆ ಯಾವಾಗ ಎಂದು ಪ್ರಶ್ನಿಸುವಂತೆಯೂ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ಕುರಿತು ಚರ್ಚೆ ನಡೆಸಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ. ಈಗಾಗಲೇ ಜಾತಿ ಗಣತಿ ವರದಿ ಸ್ವೀಕರಿಸಲಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲು ಸರ್ಕಾರದ ನಿರ್ಧರಿಸಿದೆ. ಮುಂದಿನ ಸಚಿವ ಸಂಪುಟ ಸಭೆಯನ್ನು ಮಲೈ ಮಹದೇಶ್ವರ ಬೆಟ್ಟದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಫೆಬ್ರುವರಿ 13 ರಂದು ಮುಂದಿನ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ.