ತಮಿಳುನಾಡು ರಾಜ್ಯವು ರಾಷ್ಟ್ರೀಯ ಶಿಕ್ಷಣ ನೀತಿ (2020) ಅನ್ನು ಅದರ ‘ತ್ರಿಭಾಷಾ ಸೂತ್ರ’ ಸೇರಿದಂತೆ ಜಾರಿಗೆ ತರುವಂತೆ ನಿರ್ದೇಶಿಸಬೇಕೆಂದು ಕೋರಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್. ಮಹಾದೇವನ್ ಅವರನ್ನೊಳಗೊಂಡ ಪೀಠವು, ಯಾವುದೇ ರಾಜ್ಯವು NEPಯನ್ನು ಅಳವಡಿಸಿಕೊಳ್ಳುವಂತೆ ಒತ್ತಾಯಿಸಲು ಸಂವಿಧಾನದ 32 ನೇ ವಿಧಿಯ ಅಡಿಯಲ್ಲಿ ನ್ಯಾಯಾಲಯವು ಯಾವುದೇ ನಿರ್ದೇಶನವನ್ನು ನೀಡಲು ಸಾಧ್ಯವಿಲ್ಲ ಎಂದು ತೀರ್ಪು ನೀಡಿದೆ..
ರಾಜ್ಯಗಳು ರಾಷ್ಟ್ರೀಯ ಶಿಕ್ಷಣ ನೀತಿ 2020 ಅನ್ನು ಅಳವಡಿಸಿಕೊಳ್ಳಬೇಕೆ ಅಥವಾ ಬೇಡವೇ ಎಂಬುದು ಒಂದು ಗಂಭೀರ ವಿಷಯವಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ 2020 ರಂತಹ ನೀತಿಯನ್ನು ಅಳವಡಿಸಿಕೊಳ್ಳಲು ಅದು ನೇರವಾಗಿ ರಾಜ್ಯವನ್ನು ಒತ್ತಾಯಿಸಲು ಸಾಧ್ಯವಿಲ್ಲ. ಆದಾಗ್ಯೂ, ರಾಷ್ಟ್ರೀಯ ಶಿಕ್ಷಣ ನೀತಿಗೆ ಸಂಬಂಧಿಸಿದ ರಾಜ್ಯದ ಕ್ರಮ ಅಥವಾ ನಿಷ್ಕ್ರಿಯತೆಯು ಯಾವುದೇ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದರೆ ಮಾತ್ರ ನ್ಯಾಯಾಲಯವು ಮಧ್ಯಪ್ರವೇಶಿಸಬಹುದು ಎಂದು ಹೇಳಿದೆ.
ಇತ್ತೀಚೆಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ರಾಜ್ಯದಲ್ಲಿ NEP-2020(National Education Policy) ಅನ್ನು ಜಾರಿಗೆ ತರಲಾಗುವುದಿಲ್ಲ ಎಂದು ಹೇಳಿದ್ದರು. ಅದರ ತ್ರಿಭಾಷಾ ಸೂತ್ರವು ಹಿಂದಿಯನ್ನು ರಾಜ್ಯಗಳ ಮೇಲೆ ಹೇರುವ ಪ್ರಯತ್ನವಾಗಿದೆ ಎಂದು ಖಂಡಿಸಿದ್ದರು.