ಚಾಲಕರ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದರೆ ಪರಿಹಾರ ನೀಡಬೇಕಿಲ್ಲ: ಸುಪ್ರೀಂ ಕೋರ್ಟ್ ತೀರ್ಪು

Most read

ನವದೆಹಲಿ: ಅಜಾಗರೂಕತೆ ಹಾಗೂ ಅತಿ ವೇಗವಾಗಿ ವಾಹನ ಚಲಾಯಿಸಿ ಸವಾರ ಮೃತಪಟ್ಟರೆ ಅವರ ಕುಟುಂಬಕ್ಕೆ ಮೋಟಾರು ವಾಹನ ಕಾಯ್ದೆಯಡಿ ವಿಮಾ ಕಂಪನಿಯು ಪರಿಹಾರ ನೀಡಬೇಕಿಲ್ಲ ಎಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ. 

ಅತಿವೇಗದಲ್ಲಿ ಕಾರು ಚಾಲನೆ ಮಾಡಿ ಮೃತಪಟ್ಟ ವ್ಯಕ್ತಿಯ ಪತ್ನಿ, ಪುತ್ರ ಮತ್ತು ಪೋಷಕರು ಕೋರಿದ ರೂ.80 ಲಕ್ಷ ಪರಿಹಾರ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ  ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಆರ್. ಮಹಾದೇವನ್ ಅವರ ಪೀಠ ಪರಿಹಾರ ನೀಡಲು ಆದೇಶಿಸಲು ನಿರಾಕರಿಸಿದರು.

ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ಧ ಮೇಲ್ಮನವಿದಾರರು ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ವಿಮಾ ಕಂಪನಿ ಪರಿಹಾರ ನೀಡಬೇಕು ಎಂದು ಕೋರಿ ಮೃತರ ಕುಟುಂಬದವರು ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಲು ಹೈಕೋರ್ಟ್ 2024ರ ನವೆಂಬರ್‌ನಲ್ಲಿ ನಿರಾಕರಿಸಿತ್ತು.

ಇದೀಗ ಸುಪ್ರೀಂಕೋರ್ಟ್‌, ಹೈಕೋರ್ಟ್ ನೀಡಿದ ತೀರ್ಪಿನಲ್ಲಿ ಹಸ್ತಕ್ಷೇಪ ಮಾಡಲು ಬಯಸುವುದಿಲ್ಲ. ಆದ್ದರಿಂದ ಅರ್ಜಿಯನ್ನು  ವಜಾಗೊಳಿಸಲಾಗಿದೆ ಎಂದು ನ್ಯಾಯಪೀಠವು ಆದೇಶದಲ್ಲಿ ತಿಳಿಸಿದೆ. 

2014ರ ಜೂನ್‌ನಲ್ಲಿ ಮಲ್ಲಸಂದ್ರ ಗ್ರಾಮದಿಂದ ಅರಸೀಕೆರೆ ಪಟ್ಟಣಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿ ಎನ್‌.ಎಸ್‌.ರವೀಶ ಎಂಬವರು ಮೃತಪಟ್ಟಿದ್ದರು. 

ರವೀಶ ತಂದೆ, ಸಹೋದರಿ ಹಾಗೂ ಅವರ ಮಕ್ಕಳು ಕಾರಿನಲ್ಲಿ ಇದ್ದರು. ರವೀಶ ಕಾರನ್ನು ನಿರ್ಲಕ್ಷ್ಯದಿಂದ ಚಲಾಯಿಸಿದ್ದಾರೆ. ಅವರು ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡಿದ್ದರಿಂದ ರಸ್ತೆಗೆ ಉರುಳಿಬಿದ್ದಿತ್ತು. ತೀವ್ರ ಗಾಯಗೊಂಡು ಅವರು ಮೃತಪಟ್ಟಿದ್ದರು ಎಂದು ಎಫ್‌ ಐ ಆರ್‌ ನಲ್ಲಿ ಉಲ್ಲೇಖಿಸಲಾಗಿತ್ತು.  ಮೃತರು ಅತಿವೇಗ ಮತ್ತು ನಿರ್ಲಕ್ಷ್ಯದಿಂದ ವಾಹನ ಚಾಲನೆ ಮಾಡಿದ್ದರಿಂದಲೇ ಅಪಘಾತ ಸಂಭವಿಸಿದೆ. ಆದ್ದರಿಂದ ಅವರ ಕುಟುಂಬದವರಿಗೆ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ತೀರ್ಪಿನಲ್ಲಿ ಉಲ್ಲೇಖಿಸಿತ್ತು.

More articles

Latest article