ಬೆಂಗಳೂರು:
ವಿಶ್ವ ಮಾನವ, ರಾಷ್ಟ್ರಕವಿ ಕುವೆಂಪು ಅವರು ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟ ಎಂಬ ಸಂದೇಶವನ್ನು ಜಗಕ್ಕೆ ಸಾರಿದರು. ಆದರೆ ಬಿಜೆಪಿ ಶಾಂತಿಯುತ ನಾಡಲ್ಲಿ ಅಶಾಂತಿ ವಾತಾವರಣ ಸೃಷ್ಟಿಸಲು ಮುಂದಾಗಿದ್ದಾರೆ. ಜನಾಂಗದ ನಡುವೆ ದ್ವೇಷದ ವಿಷಬೀಜ ಬಿತ್ತುತ್ತಿದ್ದಾರೆ. ಸಮಾಜದಲ್ಲಿ ಶಾಂತಿ ಕದಡಿ, ದ್ವೇಷ ಬಿತ್ತುವವರ ವಿರುದ್ಧ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು ಎಂದು ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಆಗ್ರಹಪಡಿಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ಜಾತಿಜನಾಂಗದ ಹಿತ ಕಾಪಾಡುತ್ತಾ ಬಂದಿದೆ. ಸಾಮರಸ್ಯಕ್ಕೆ ಧಕ್ಕೆಯಾಗುವುದಕ್ಕೆ ಆಸ್ಪದ ಕೊಟ್ಟಿಲ್ಲ. ಆದರೆ ಮಹಾರಾಷ್ಟ್ರ ಚುನಾವಣೆ ಹಾಗೂ ರಾಜ್ಯದ ಉಪಚುನಾವಣೆ ಘೋಷಣೆ ಆಗುತ್ತಿದ್ದಂತೆ ಪ್ರತಿಪಕ್ಷ ಬಿಜೆಪಿ ಮುಖಂಡರು ರಾಜ್ಯದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಿ ಕೋಮಸೌಹರ್ದತೆ ಕದಡುವ ಕೆಲಸಕ್ಕೆ ಕೈಹಾಕಿದ್ದಾರೆ ಎಂದು ಆಪಾದಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸ್ಥಾಪನೆಯಾಗಿದ್ದು ಜನರು ಶಾಂತಿ ಸಹಬಾಳ್ವೆಯಿಂದ ಜೀವನ ಸಾಗಿಸುತ್ತಿದ್ದಾರೆ. ಆದರೆ ಇದನ್ನು ಸಹಿಸದ ಅವರು ಜಾತಿ, ಧರ್ಮದ ನಡುವೆ ವಿಷ ಬೀಜ ಬಿತ್ತಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಉನ್ನಾರ ನಡೆಸುತ್ತಿದ್ದಾರೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರನ್ನು ಕಾಂಗ್ರೆಸ್ ಸರ್ಕಾರ ಎಂದಿಗೂ ಸಹಿಸುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ವಕ್ಫ್ ಜಮೀನು ವಿಚಾರವಾಗಿ ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿಸಿ, ಸಮಾಜದಲ್ಲಿ ಶಾಂತಿ ಕದಡಿ, ಕೋಮುಸೌಹಾರ್ದ ಹದಗೆಡಿಸುವ ಕೆಲಸಕ್ಕೆ ವಿರೋಧ ಪಕ್ಷಗಳು ಮುಂದಾಗಿವೆ. ರಾಜ್ಯದೆಲ್ಲೆಡೆ ಶಾಂತಿ ಕದಡುವ ವಾತಾವರಣ ಸೃಷ್ಟಿಸಲು ಯತ್ನಿಸುತ್ತಿವೆ. ಶಾಂತಿ ಸುವ್ಯವಸ್ಥೆ ಕಾಪಾಡಲು ಸರ್ಕಾರ ಬದ್ಧವಾಗಿದೆ. ಅನಗತ್ಯ ಗೊಂದಲಗಳಿಗೆ ರಾಜ್ಯದ ಜನತೆ ಒಳಗಾಗಬಾರದು. ಸಮಾಜದಲ್ಲಿ ಶಾಂತಿ ಭಂಗಗೊಳಿಸಲು ಯತ್ನಿಸುವವರ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕು ಎಂದು ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.