ಹೈದರಾಬಾದ್: ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಟಿಪ್ಪರ್ ಮತ್ತು ರಾಜ್ಯ ಸಾರಿಗೆ ಸಂಸ್ಥೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಈವರೆಗೆ 19 ಮಂದಿ ಮೃತಪಟ್ಟಿದ್ದಾರೆ. ಆಂಧ್ರಪ್ರದೆಶದ ಶ್ರೀಕಾಕುಲಂ ಜಿಲ್ಲೆಯ ದೇವಸ್ಥಾನವೊಂದರಲ್ಲಿ ಕಾಲ್ತುಳಿತ ಸಂಭವಿಸಿ 12 ಮಂದಿ ಅಸುನೀಗಿದ ಘಟನೆ ಮಾಸುವ ಮುನ್ನವೇ ಈ ದುರಂತ ಸಂಭವಿಸಿದೆ.
ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಎಂಬಲ್ಲಿ ಜಲ್ಲಿಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಬಸ್ ಮೇಲೆ ಬಿದ್ದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂದು ಮಗು, 10 ಮಹಿಳೆಯರು ಸೇರಿ 19 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ. ಈ ದುರಂತದಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಎಂದು ಅವರು ನೀಡಿದ್ದಾರೆ.
ತಪ್ಪು ದಾರಿಯಲ್ಲಿ ಬಂದ ಟಿಪ್ಪರ್ ಲಾರಿ ಬಸ್ ಮೇಲೆ ಬಿದ್ದ ಪರಿಣಾಮ ಪ್ರಯಾಣಿಕರು ಬಸ್ ನಿಂದ ಹೊರಗೆ ಬರಲಾಗದೆ ಒಳಗೆ ಸಿಲುಕಿಕೊಂಡಿದ್ದರು. ನಂತರ ಪೊಲೀಸರು ಜೆಸಿಬಿ ಯಂತ್ರಗಳನ್ನು ತರಿಸಿ ಕೆಲವು ಪ್ರಯಾಣಿಕರನ್ನು ರಕ್ಷಿಸಿದ್ದಾರೆ.
ಬಸ್ ನಲ್ಲಿ ಅಂದಾಜು 40 ಪ್ರಯಾಣಿಕರಿದ್ದರು. ಮೃತರನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡಿರುವ 20 ಮಂದಿಯನ್ನು ಬೇರೆ ಬೇರೆ ಆಸ್ಪತ್ರೆಗಳಿಗೆ ದಾಖಳಿಸಲಾಗಿದೆ.
ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.

