ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸೇರಿದಂತೆ ಜಾಗತಿಕ ನಾಯಕರು ಕಟು ಶಬ್ದಗಳಲ್ಲಿ ಖಂಡಿಸಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಅಮಾಯಕರ ಜೀವಹಾನಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ. ಘೋರ ದಾಳಿಯ ಅಪರಾಧಿಗಳನ್ನು ಶಿಕ್ಷಿಸಲು ಭಾರತಕ್ಕೆ ಸಂಪೂರ್ಣ ಬೆಂಬಲ ನIಡುತ್ಥೆನೆ ಎಂದು ಅವರು ಹೇಳಿದ್ದಾರೆ. ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಭಾರತ ಮತ್ತು ಅಮೆರಿಕ ಒಟ್ಟಾಗಿ ನಿಂತಿವೆ ಎಂದು ಅವರು ತಿಳಿಸಿದ್ದಾರೆ.
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೂ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಕ್ರೂರ ಅಪರಾಧಕ್ಕೆ ಯಾವುದೇ ಸಮರ್ಥನೆ ಇಲ್ಲ. ಅಪರಾಧಿಗಳು ಅರ್ಹ ಶಿಕ್ಷೆಯನ್ನು ಎದುರಿಸಲೇಬೇಕು ಎಂದು ಹೇಳಿದ್ದಾರೆ. ಭಯೋತ್ಪಾದನೆಯ ವಿರುದ್ಧ ಹೋರಾಡುವಲ್ಲಿ ಭಾರತೀಯದೊಂದಿಗೆ ಎಲ್ಲಾ ರೀತಿಯ ಸಹಕಾರವನ್ನು ಮತ್ತಷ್ಟು ಹೆಚ್ಚಿಸಲು ರಷ್ಯಾ ಕಟಿಬದ್ಧವಾಗಿದೆ. ದಯವಿಟ್ಟು ಮೃತರ ಬಂಧುಗಳು ಮತ್ತು ಆತ್ಮೀಯರಿಗೆ ನನ್ನ ಸಂತಾಪ ತಲುಪಿಸಿ, ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಅವರು ತಮ್ಮ ಸಂತಾಪದಲ್ಲಿ ಹೇಳಿದ್ದಾರೆ.
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಮ್ಮ ಎಕ್ಸ್ ಪೋಸ್ಟ್‌ನಲ್ಲಿ ಡಜನ್‌ಗಟ್ಟಲೆ ಅಮಾಯಕರ ಸಾವಿಗೆ ಕಾರಣವಾದ ಅಮಾನುಷ ಭಯೋತ್ಪಾದಕ ದಾಳಿಯನ್ನು ಖಂಡಿಸುತ್ತೇನೆ. ಇದರಿಂದ ಅತೀವ ದುಃಖವಾಗಿದೆ ಎಂದು ಎಂದು ತಿಳಿಸಿದ್ದಾರೆ. ಮೃತರ ಕುಟುಂಬಗಳಿಗೆ ನಾನು ಸಂತಾಪ ಸೂಚಿಸುತ್ತೇನೆ. ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಇಸ್ರೇಲ್, ಭಾರತಕ್ಕೆ ಬೆಂಬಲ ನೀಡಲಿದೆ ಎಂದು ಅವರು ಹೇಳಿದ್ದಾರೆ.
ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ ತಾವು ತೀವ್ರವಾಗಿ ದುಃಖಿತರಾಗಿದ್ದೇವೆ ಎಂದು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ತಿಳಿಸಿದ್ದಾರೆ. ಸಂತ್ರಸ್ತ ಕುಟುಂಬಗಳು, ಗಾಯಗೊಂಡವರು, ಸರ್ಕಾರ ಮತ್ತು ಇಡೀ ಭಾರತೀಯರಿಗೆ ಅವರು ಸಂತಾಪ ಸೂಚಿಸಿದ್ದಾರೆ. ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರ ಭಾರತದ ಚೊಚ್ಚಲ ಭೇಟಿಯ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ವಿನಾಶಕಾರಿ ಭಯೋತ್ಪಾದಕ ದಾಳಿಯಲ್ಲಿ ಮೃತರ ಕುಟುಂಬಗಳಿಗೆ ಅವರು ಸಂತಾಪ ಸೂಚಿಸಿದ್ದಾರೆ.
ಭಾರತದ ಪಹಲ್ಗಾಮ್‌ನಲ್ಲಿ ನಡೆದ ವಿನಾಶಕಾರಿ ಭಯೋತ್ಪಾದಕ ದಾಳಿಯ ಸಂತ್ರಸ್ತರಿಗೆ ಉಷಾ ಮತ್ತು ನಾನು ನಮ್ಮ ಸಂತಾಪ ಸೂಚಿಸುತ್ತೇವೆ. ಕಳೆದ ಕೆಲವು ದಿನಗಳಿಂದ, ಈ ದೇಶ ಮತ್ತು ಅದರ ಜನರ ಜೊತೆಗಿದ್ದೇವೆ. ಈ ಭಯಾನಕ ದಾಳಿಯ ನಡುವೆ ಅವರು ಶೋಕಿಸುತ್ತಿರುವಾಗ ನಾವು ಅವರ ನೋವನ್ನು ಹಂಚಿಕೊಳ್ಳಲು ಬಯಸುತ್ತೇವೆ’ ಎಂದು ತಿಳಿಸಿದ್ಧಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಿಂದ ತಮ್ಮ ದೇಶವು ತೀವ್ರ ದುಃಖಿತವಾಗಿದೆ ಎಂದು ಇಸ್ರೇಲ್ ವಿದೇಶಾಂಗ ಸಚಿವ ಗಿಡಿಯಾನ್ ಸಾರ್ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪಟ್ಟಣದ ಬಳಿಯ ಪ್ರಸಿದ್ಧ ಹುಲ್ಲುಗಾವಲಿನಲ್ಲಿ ಮಂಗಳವಾರ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಇದರಲ್ಲಿ 28 ಮಂದಿ ಮೃತಪಟ್ಟಿದ್ದಾರೆ. 2019ರ ಪುಲ್ವಾಮಾ ದಾಳಿಯ ನಂತರ ಕಣಿವೆಯಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ. ಪಾಕಿಸ್ತಾನ ಮೂಲದ ಲಷ್ಕರ್-ಎ-ತಯ್ಯಬಾ (ಎಲ್‌ಇಟಿ) ಭಯೋತ್ಪಾದಕ ಸಂಘಟನೆ ಜತೆ ನಂಟು ಹೊಂದಿರುವ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಪಿ) ಈ ದಾಳಿ ಹೊಣೆಯನ್ನು ಹೊತ್ತುಕೊಂಡಿದೆ.