RSS ಮಾತ್ರವಲ್ಲ, ಜನರಿಗೆ ತೊಂದರೆ ನೀಡುವ ಎಲ್ಲಾ ಸಂಘಟನೆಗಳ ನಿರ್ಬಂಧಕ್ಕೆ ಚಿಂತನೆ; ಸಿಎಂ ಸಿದ್ದರಾಮಯ್ಯ

Most read

ಮೈಸೂರು: ಆರ್ ಎಸ್ ಎಸ್ ಅಷ್ಟೇ ಅಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುವ ಎಲ್ಲಾ ಸಂಘಟನೆಗಳನ್ನು ನಿರ್ಬಂಧಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಲ್ಲಿಗೆ ಆಗಮಿಸಿದ ಅವರು ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ರೀತಿ ಜನರಿಗೆ ತೊಂದರೆ ಉಂಟು ಮಾಡುತ್ತಿರುವ ಕೆಲವು ಸಂಘಟನೆಗಳ ಚಟುವಟಿಕೆಗಳಿಗೆ ತಮಿಳುನಾಡು ಸರ್ಕಾರ ನಿರ್ಬಂಧ ವಿಧಿಸಿದೆ. ಆ ಮಾಹಿತಿ ಆಧಾರದಲ್ಲಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಿದ್ದೇವೆ ಎಂದರು.

ಅನುದಾನ ತಾರತಮ್ಯ ಕುರಿತು ಜೆಡಿಎಸ್‌ ಶಾಸಕರ ಆರೋಪ ಕುರಿತು ಪ್ರತಿಕ್ರಿಯಿಸಿದ ಅವರು, ಅವರ ಪಕ್ಷ ಅಧಿಕಾರದಲ್ಲಿದ್ದಾಗ ಎಷ್ಟು ಅನುದಾನ ನೀಡಿತ್ತು? ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ಇದ್ದಾಗ ಕಾಂಗೆಸ್ ಶಾಸಕರಿಗೆ ಎಷ್ಟು ಅನುದಾನ ನೀಡಿದ್ದರು? ಈಗ ಸುಖಾಸುಮ್ಮನೆ ಆರೋಪ ಮಾಡುವುದು ಸರಿಯಲ್ಲ. ಸುಳ್ಳು ಹೇಳಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಬಾರದು ಎಂದರು. ಜೆಡಿಎಸ್ ಅಧಿಕಾರದಲ್ಲಿದ್ದಾಗ ಜನರಿಗಾಗಿ ಏನನ್ನೂ ಮಾಡಲಿಲ್ಲ. ನಾವು ಇಡೀ ರಾಜ್ಯಕ್ಕೆ ಉತ್ತಮ ಕೆಲಸ ಮಾಡುತ್ತಿದ್ದೇವೆ. ರಾಜ್ಯದ ಅಭಿವೃದ್ಧಿ ನಮ್ಮ ಗುರಿ ಎಂದು ತಿಳಿಸಿದರು.

ತಾಲೂಕು, ಜಿಲ್ಲಾ ಪಂಚಾಯತ್ ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸರ್ಕಾರ ಸಿದ್ಧವಾಗಿದೆ. ನ್ಯಾಯಾಲಯ ತೀರ್ಮಾನಿಸಿದ ತಕ್ಷಣ ಚುನಾವಣೆ ಮಾಡುತ್ತೇವೆ. ಪ್ರಜಾಪ್ರಭುತ್ವ ಗಟ್ಟಿಯಾಗಿರುವುದು ಚುನಾವಣೆಗಳಿಂದ ಎಂದರು.

More articles

Latest article