ನ್ಯೂಯಾರ್ಕ್, ನ.12 : ಅಮೆರಿಕದ ನ್ಯೂಯಾರ್ಕ್ ನಗರದ ಬ್ರೂಕ್ಲಿನ್ನ ಫ್ಲಾಟ್ಬುಷ್ ಪ್ರದೇಶದಲ್ಲಿ ನಿರ್ಮಾಣ ಹಂತದ ಸ್ಥಳದ ಪಕ್ಕದಲ್ಲಿದ್ದ ಮೂರು ಅಂತಸ್ತಿನ ಅಪಾರ್ಟ್ಮೆಂಟ್ ಕಟ್ಟಡ ಕುಸಿದು ಇಬ್ಬರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಬುಧವಾರ ಸಂಜೆ ಸುಮಾರು 4 ಗಂಟೆಗೆ (ಸ್ಥಳೀಯ ಕಾಲಮಾನ) 1930ರಲ್ಲಿ ನಿರ್ಮಿಸಲಾಗಿದ್ದ ನಾಲ್ಕು ವಸತಿ ಘಟಕಗಳ ಕಟ್ಟಡ ಕುಸಿದು ಪಕ್ಕದ ನಿರ್ಮಾಣ ಸ್ಥಳಕ್ಕೆ ಉರುಳಿದೆ. ಘಟನಾ ಸ್ಥಳದಲ್ಲಿ ಅಗೆಯುವ ಕಾಮಗಾರಿ ನಡೆಯುತ್ತಿತ್ತು. ಕಟ್ಟಡ ಕುಸಿತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ನಗರದ ಅಗ್ನಿಶಾಮಕ ದಳದ ಮುಖ್ಯಸ್ಥ ಜಾನ್ ಎಸ್ಪೊಸಿಟೊ ತಿಳಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ. ಅವಶೇಷಗಳ ಅಡಿಯಲ್ಲಿ ಇನ್ನೂ ಯಾರಾದರೂ ಸಿಲುಕಿರುವ ಸಾಧ್ಯತೆಯ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಘಟನೆ ನಡೆದ ಒಂದು ನಿಮಿಷದೊಳಗೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಅವಶೇಷಗಳಡಿ ಸಿಲುಕಿದ್ದವರನ್ನು ಹೊರತೆಗೆಯಲು ನೆರವಾದರು. ಕಟ್ಟಡ ಕುಸಿದಾಗ ಒಳಗೆ ಎಷ್ಟು ಮಂದಿ ಇದ್ದರು ಹಾಗೂ ನಿರ್ಮಾಣ ಸ್ಥಳದಲ್ಲಿ ಎಷ್ಟು ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿಲ್ಲ.
ನ್ಯೂಯಾರ್ಕ್ ಮೇಯರ್ ಜೊಹ್ರಾನ್ ಮಮ್ದಾನಿ ಅವರು ಇಬ್ಬರು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

