ನವದೆಹಲಿ: ಸಂಸತ್ತಿನಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ನಾಯಕ ಡೆರೆಕ್ ಒಬ್ರಿಯಾನ್ ಹಕ್ಕು ಚ್ಯುತಿ ಮಂಡಿಸಿದ್ದಾರೆ. ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಸವಲತ್ತು ಉಲ್ಲಂಘನೆಯ ಆರೋಪದಲ್ಲಿ ರಾಜ್ಯಗಳ ಕೌನ್ಸಿಲ್‌ನಲ್ಲಿ ಕಾರ್ಯವಿಧಾನ ಮತ್ತು ವ್ಯವಹಾರದ ನಡವಳಿಕೆಯ ನಿಯಮಗಳ ನಿಯಮ 187ರ ಅಡಿಯಲ್ಲಿ ನೋಟಿಸ್ ನೀಡಿದ್ದಾರೆ.
ಡಿಸೆಂಬರ್ 17ರಂದು ನಡೆದ ಸಂಸತ್ತಿನ ಅಧಿವೇಶನದಲ್ಲಿ ಅಮಿತ್ ಶಾ ಅಂಬೇಡ್ಕರ್ ಅವರಿಗೆ ಮಾಡಿದ ಟೀಕೆಗಳಿಗೆ ಸಂಬಂಧಿಸಿದಂತೆ ಈ ನೋಟಿಸ್ ನೀಡಲಾಗಿದೆ. ಇದು ಡಾ. ಬಿ.ಆರ್ ಅಂಬೇಡ್ಕರ್ ಅವರ ಪರಂಪರೆ ಮತ್ತು ಸಂಸತ್ತಿನ ಘನತೆಗೆ ಧಕ್ಕೆ ತರುತ್ತದೆ ಎಂದು ಒಬ್ರಿಯಾನ್ ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಇತ್ತೀಚಿನ ದಿನಗಳಲ್ಲಿ ಅಂಬೇಡ್ಕರ್, ಅಂಬೇಡ್ಕರ್, ಎನ್ನುವುದು ಫ್ಯಾಶನ್ ಆಗಿದೆ. ಒಂದುವೇಳೆ ಅವರು ಅಂಬೇಡ್ಕರ್ ಬದಲು ಈ ರೀತಿ ದೇವರ ಹೆಸರು ಜಪ ಮಾಡಿದ್ದರೆ ಸ್ವರ್ಗದಲ್ಲಿ ಸ್ಥಾನ ಪಡೆಯುತ್ತಿದ್ದರು ಎಂದು ಹೇಳಿದ್ದರು. ಈ ಹೇಳಿಕೆ ವಿಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದೆ.
ಅಮಿತ್ ಶಾ ರಾಜೀನಾಮೆ ನೀಡಬೇಕು ಮತ್ತು ತಮ್ಮ ಹೇಳಿಕೆಗಾಗಿ ಸಾರ್ವಜನಿಕವಾಗಿ ಮತ್ತು ಸಂಸತ್ತಿನಲ್ಲಿ ಕ್ಷಮೆ ಯಾಚಿಸಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸಿದೆ.