ವರ್ಗಾವಣೆ ಆಮಿಷ: ಆರೋಪಿ ಬಂಧನ
ಬೆಂಗಳೂರು: ವರ್ಗಾವಣೆ ಮಾಡಿಸಿಕೊಡುವುದಾಗಿ ಸರ್ಕಾರಿ ಅಧಿಕಾರಿಗಳಿಗೆ ಆಮಿಷವೊಡ್ಡಿ ಹಣ ಪಡೆದು ವಂಚಿಸುತ್ತಿದ್ದ ಹಾವೇರಿ ಜಿಲ್ಲೆಯ ರಾಘವೇಂದ್ರ ಎಂಬ ಆರೋಪಿಯನ್ನು ವಿಧಾನಸೌಧ ಠಾಣೆಯ ಪೊಲೀಸರು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ.ಉಪ ವಿಭಾಗಾಧಿಕಾರಿ ಹುದ್ದೆಯ ಅಧಿಕಾರದಲ್ಲಿರುವ ಕೆಎಎಸ್ ಅಧಿಕಾರಿಯೊಬ್ಬರು ನೀಡಿದ ದೂರು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಬಳಿಯಿದ್ದ ನಕಲಿ ವರ್ಗಾವಣೆ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಆರೋಪಿ ಪ್ಯಾಲೇಸ್ ಗುಟ್ಟಹಳ್ಳಿಯ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ. ಉಪ ವಿಭಾಗಾಧಿಕಾರಿ ಸೇರಿದಂತೆ ಹಲವು ಸರ್ಕಾರಿ ಅಧಿಕಾರಿಗಳಿಗೆ ತಮಗೆ ಬೇಕಾದ ಸ್ಥಳಗಳಿಗೆ ವರ್ಗಾವಣೆ ಮಾಡಿಸಿಕೊಡಿವುದಾಗಿ ಆಮಿಷವೊಡ್ಡಿ ಹಣ ಪಡೆದುಕೊಳ್ಳುತ್ತಿದ್ದ. ಆದರೆ ಯಾವುದೇ ವರ್ಗಾವಣೆ ಮಾಡಿಸದೆ ವಂಚಿಸುತ್ತಿದ್ದ. ದೂರುದಾರ ಅಧಿಕಾರಿಯು ಬೆಂಗಳೂರು ಉತ್ತರ ಉಪ ವಿಭಾಗದ ಉಪ ವಿಭಾಗಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಿಸಿಕೊಳ್ಳಲು ಪ್ರಯತ್ನ ನಡೆಸುತ್ತಿದ್ದರು. ಈ ವಿಷಯ ತಿಳಿದು ಅವರನ್ನು ಸಂಪರ್ಕಿಸಿ ವರ್ಗಾವಣೆಮಾಡಿಸಿಕೊಡುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ್ದ. ನಂತರ ಆ ಅಧಿಕಾರಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.