Saturday, July 27, 2024

ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ತ್ವರಿತಗತಿಯಲ್ಲಿ ಕನ್ನಡ ಅಳವಡಿಸಿ : ತುಷಾರ್ ಗಿರಿ ನಾಥ್

Most read

ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆ ಅಳವಡಿಸುವ ಸಂಬಂಧ ಆಯಾ ವಲಯ ವ್ಯಾಪ್ತಿಯಲ್ಲಿ ತ್ವರಿತಗತಿಯಲ್ಲಿ ಕನ್ನಡ ನಾಮಫಲಕಗಳನ್ನು ಅಳವಡಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಅಳವಡಿಕೆ ಹಾಗೂ ಸಹಾಯ 2.0ರಲ್ಲಿ ಬಂದಂತಹ ದೂರುಗಳಿಗೆ ಸಂಬಂಧಿಸಿದಂತೆ ಘನತ್ಯಾಜ್ಯ ನಿರ್ವಹಣಾ ನಿಯಮಿತದ ಸಭಾಂಗಣ ಕೊಠಡಿಯಲ್ಲಿ ನಡೆದ ವರ್ಚ್ಯುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 49,241 ಮಳಿಗೆಗಳಿಗೆ ನೋಟಿಸ್ ನೀಡಲಾಗಿದ್ದು, 16813 ಮಳಿಗೆಗಳು ಶೇ. 60 ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಲಾಗಿದ್ದು, 32428 ಮಳಿಗೆಗಳಲ್ಲಿ ನಾಮಫಲಕಗಳನ್ನು ಅಳವಡಿಸಬೇಕಿದೆ. ಪೆಬ್ರವರಿ ಅಂತ್ಯದೊಳಗಾಗಿ ಎಲ್ಲಾ ಮಳಿಗೆಗಳಲ್ಲಿ ಕನ್ನಡ ನಾಮಫಲಕವನ್ನು ಅಳವಡಿಸಿಕೊಂಡಿರಬೇಕು. ಅದಕ್ಕಾಗಿ ಆಯಾ ವಲಯಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಆರ್ಟಿರಿಯಲ್, ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಬರುವ ವಾಣಿಜ್ಯ ಮಳಿಗೆಗಳಲ್ಲಿ ಆದ್ಯತೆ ಮೇರೆಗೆ ಕನ್ನಡ ನಾಮಫಲಕಗಳನ್ನು ಅಳವಡಿಸಬೇಕು. ಮಳಿಗೆಗಳಿಗೆ ತಿಳುವಳಿಕೆ ಪತ್ರ ನೀಡಿದ ಬಳಿಕ 7 ದಿನ ಕಾಲಾವಕಾಶ ನೀಡಿದ ಬಳಿಕವೂ ಕನ್ನಡ ನಾಮಫಲಕ‌ ಅಳವಡಿಸದಿದ್ದಲ್ಲಿ ಅಂತಹ ಮಳಿಗೆಯ ಮೇಲೆ ಶಿಸ್ತು ಕ್ರಮ ಜರುಗಿಸಿ ಕೂಡಲೆ ನಾಮಫಲಕ ಅಳವಡಿಸುವಂತೆ ಮಾಡಬೇಕೆಂದು ಸೂಚಿಸಿದರು.

ಸಹಾಯ 2.0ರಲ್ಲಿ ಬರುವ ದೂರುಗಳನ್ನು ತ್ವರಿತವಾಗಿ ಇತ್ಯರ್ಥ ಮಾಡಿ:

ಪಾಲಿಕೆಯ ಸಹಾಯ 2.0ರಲ್ಲಿ ಬರುವ ದೂರುಗಳನ್ನು ನಿಗದಿತ ಸಮಯದಲ್ಲಿ ಇತ್ಯರ್ಥಪಡಿಸಬೇಕು. ದೂರುಗಳು ಬಂದ ತಕ್ಷಣ ಬಗೆಹರಿಸಬಹುದಾದ ಸಮಸ್ಯೆಗಳನ್ನು ಕೂಡಲೆ ಬಗೆಹರಿಸಬೇಕೆಂದು ವಲಯ ಆಯುಕ್ತರಿಗೆ ಸೂಚನೆ ನೀಡಿದರು.

ಆಯಾ ವಲಯ ವ್ಯಾಪ್ತಿಯಲ್ಲಿ ಪ್ರಮುಖವಾಗಿ ಕಸದ ಸಮಸ್ಯೆ, ಬೀದಿ ದೀಪಗಳ ಅಳವಡಿಕೆ ಹಾಗೂ ರಸ್ತೆ ಗುಂಡಿ ಸಮಸ್ಯೆಗಳ ಕುರಿತು ದೂರುಗಳು ಬರುತ್ತವೆ. ಬರುವಂತಹ ದೂರುಗಳನ್ನು ಆದ್ಯತೆ ಮೇರೆಗೆ ತ್ವರಿತಗತಿಯಲ್ಲಿ ಇತ್ಯರ್ಥಪಡಿಸಬೇಕೆಂದು ಸೂಚನೆ ನೀಡಿದರು.

More articles

Latest article