ಚೆನ್ನೈ, ನ. 19: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ, ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್ ಅವರನ್ನು ಸೋಲಿಸಿದ್ದ ಟಿವಿಕೆ ಪಕ್ಷದ ಶಾಸಕ ವಿ.ಎಸ್. ಬಾಬು (75) ನಿಧನರಾಗಿದ್ದಾರೆ.
ದೀರ್ಘಕಾಲದ ಉಸಿರಾಟದ ತೊಂದರೆ ಹಾಗೂ ಹೃದಯಸ್ತಂಭನದಿಂದ ಚೆನ್ನೈನ ಎಂಜಿಎಂ ಹೆಲ್ತ್ಕೇರ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.
ವಿ.ಎಸ್. ಬಾಬು ಮೂಲತಃ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷದ ಮೂಲಕ ರಾಜಕೀಯ ಬಂದವರು. ಡಿಎಂಕೆಯ ಉತ್ತರ ಚೆನ್ನೈ ಜಿಲ್ಲಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಅವರು, 2006ರಲ್ಲಿ ಪುರಸವಾಕ್ಕಂ ಕ್ಷೇತ್ರದಿಂದ ಗೆದ್ದು ಮೊದಲ ಬಾರಿಗೆ ತಮಿಳುನಾಡು ವಿಧಾನಸಭೆ ಪ್ರವೇಶಿಸಿದ್ದರು. ಬಳಿಕ ಡಿಎಂಕೆ ತೊರೆದು ಎಐಎಡಿಎಂಕೆ ಸೇರಿದ್ದ ಅವರು ಫೆಬ್ರವರಿ 2026ರಲ್ಲಿ ನಟ ವಿಜಯ್ ಅವರ ಟಿವಿಕೆ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.
2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕೊಳತ್ತೂರು ಕ್ಷೇತ್ರದಿಂದ ಸ್ಪರ್ಧಿಸಿದ ಬಾಬು, 82,997 ಮತಗಳನ್ನು ಪಡೆಯುವ ಮೂಲಕ 74,202 ಮತಗಳನ್ನು ಪಡೆದ ಎಂ.ಕೆ. ಸ್ಟಾಲಿನ್ ಅವರನ್ನು 8,795 ಮತಗಳ ಅಂತರದಿಂದ ಪರಾಭವಗೊಳಿಸಿ ಭಾರಿ ಸಂಚಲನ ಮೂಡಿಸಿದ್ದರು. 2011ರಿಂದ ಸತತವಾಗಿ ಕೊಳತ್ತೂರು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ, ಹಾಲಿ ಮುಖ್ಯಮಂತ್ರಿಯಾಗಿದ್ದ ಸ್ಟಾಲಿನ್ ಸೋಲು ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿತ್ತು.

