ಯುಪಿ ಹತ್ರಾಸ್‌ನಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಕಾಲ್ತುಳಿತ: ಸಾವಿನ ಸಂಖ್ಯೆ 116ಕ್ಕೆ ಏರಿಕೆ

Most read

ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಮಂಗಳವಾರ ಭೋಲೆ ಬಾಬಾ ಸತ್ಸಂಗ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾರಿ ಕಾಲ್ತುಳಿತ ಸಂಭವಿಸಿದ್ದು, ಸಾವಿನ ಸಂಖ್ಯೆ ಕ್ಷಣ ಕ್ಷಣಕ್ಕು ಏರುತ್ತಲೇ ಇದೆ. ಈ ಘಟನೆಯಲ್ಲಿ 116 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳಿಗೆ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನೂರಾರು ಜನರು ಸತ್ಸಂಗದಲ್ಲಿ ಭಾಗವಹಿಸಿದ್ದರು. ಇದರಲ್ಲಿ ಮಹಿಳಾ ಭಕ್ತರ ಸಂಖ್ಯೆಯೇ ಅಧಿಕವಾಗಿತ್ತು. ಗುಂಪಿನಲ್ಲಿ ಮಕ್ಕಳು ಮತ್ತು ವೃದ್ಧರೂ ಇದ್ದರು. ಮೃತಪಟ್ಟವರಲ್ಲಿ ಹೆಚ್ಚಿನವರು ಮಹಿಳೆಯರಿದ್ದಾರೆ. ಮಕ್ಕಳು, ವೃದ್ಧರೂ ಪ್ರಾಣ ಕಳೆದುಕೊಂಡಿದ್ದಾರೆ.

ಪುಲ್ರೈ ಗ್ರಾಮದಲ್ಲಿ ನಡೆದ ಸತ್ಸಂಗ ಧಾರ್ಮಿಕ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ ಎಂದು ಇಟಾಹ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ಸಿಂಗ್ ಹೇಳಿದ್ದಾರೆ.

ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಆರ್ಥಿಕ ನೆರವು ಘೋಷಿಸಿದ್ದಾರೆ. ಗಾಯಾಳುಗಳಿಗೆ 50 ಸಾವಿರ ಘೋಷಣೆ ಮಾಡಿದೆ.

“ಹತ್ರಾಸ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದ ದೃಷ್ಟಿಯಿಂದ, ಜಿಲ್ಲಾಡಳಿತವು ಘಟನೆಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಸಾರ್ವಜನಿಕರ ಸಹಾಯಕ್ಕಾಗಿ 05722227041 ಮತ್ತು 057222227042 ಸಹಾಯವಾಣಿಗಳನ್ನು ನೀಡಿದೆ” ಎಂದು ಹತ್ರಾಸ್ ಡಿಎಂ ಆಶಿಶ್ ಕುಮಾರ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. 

More articles

Latest article