ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಕಲ್ಯಾಣ ನಿಧಿ ಹಣ ದುರ್ಬಳಕೆ ಹಗರಣದ ಆರೋಪದಡಿಯಲ್ಲಿ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಬಂಧನ ಭೀತಿಯಲ್ಲಿದ್ದ ನಾಗೇಂದ್ರ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ನಾಗೇಂದ್ರ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಶಾಸಕರು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಇಂದು ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದರು.
ನ್ಯಾಯಾಲಯದ ಅನುಮತಿ ಇಲ್ಲದೆ ಕೋರ್ಟ್ ವ್ಯಾಪ್ತಿ ಪ್ರದೇಶ ಬಿಟ್ಟು ಹೊರಹೋಗುವಂತಿಲ್ಲ. ಮೂರು ತಿಂಗಳ ಅವಧಿಗೆ ಎರಡನೇ ಭಾನುವಾರ ತನಿಖಾಧಿಕಾರಿ ಮುಂದೆ ಹಾಜರಾಗಿ ಸಹಿ ಹಾಕಬೇಕು. ತನಿಖಾಧಿಕಾರಿ ಮುಂದೆ 15 ದಿನಗಳ ಒಳಗಾಗಿ ಹಾಜರಾಗಬೇಕು. ಸಾಕ್ಷಿಗಳ ಮೇಲೆ ಮೇಲೆ ಪ್ರಭಾವ ಬೀರಬಾರದು ಮತ್ತು ಇದೇ ರೀತಿಯ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಬಾರದು ಎಂಬ ಷರತ್ತುಗಳನ್ನು ವಿಧಿಸಲಾಗಿದೆ.

