ಬೆಂಗಳೂರು : ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ಜೂನ್ 18ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್ ತನ್ನ ನಾಲ್ವರು ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ.
ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಈ ಪೈಕಿ 4 ಸ್ಥಾನಗಳು ಆಡಳಿತಾರೂಢ ಕಾಂಗ್ರೆಸ್ಗೆ ಲಭ್ಯವಾಗಲಿದ್ದು, ಅಭ್ಯರ್ಥಿಗಳನ್ನು ಎಐಸಿಸಿ ಅಧ್ಯಕ್ಷರ ಅನುಮತಿ ಮೇಲೆ ಘೋಷಣೆ ಮಾಡಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರ, ಶಿವಣ್ಣ ಮಳವಳ್ಳಿ ಮತ್ತು ಪಿ.ವಿ. ಮೋಹನ್ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಈ ಪೈಕಿ ಹರಿಪ್ರಸಾದ್ ಮತ್ತು ತಿಪ್ಪಣ್ಣಪ್ಪ ಕಮನಕೂರ ಹಾಲಿ ವಿಧಾನ ಪರಿಷತ್ ಸದಸ್ಯರಿದ್ದಾರೆ.
ಮಳವಳ್ಳಿ ಶಿವಣ್ಣ ಅವರು ಡಾ.ರಾಮ್ಮನೋಹರ್ ಲೋಹಿಯಾ ವಿಚಾರ ವೇದಿಕೆ ಅಧ್ಯಕ್ಷರಾಗಿ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಸಿದ್ದರಾಮಯ್ಯ ಅವರ ಆಪ್ತರಾದ ಶಿವಣ್ಣ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ.
ಮೂಲತಃ ಮಂಗಳೂರಿನ ಪಿ.ವಿ. ಮೋಹನ್ ಎಐಸಿಸಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇತ್ತೀಚೆಗೆ ನಡೆದ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಸಕ್ರಿಯರಾಗಿ ಕಾರ್ಯನಿರ್ವಹಿಸಿದ್ದರು. ಈಗ ಅವರಿಗೆ ವಿಧಾನ ಪರಿಷತ್ತಿನಲ್ಲಿ ಸ್ಥಾನ ಕಲ್ಪಿಸಲಾಗುತ್ತಿದೆ.

