ವಿಜಯೇಂದ್ರ ಬದಲಾವಣೆ ಆಗಲೇಬೇಕು: ಯತ್ನಾಳ

Most read

ಹುಬ್ಬಳ್ಳಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಬದಲಾವಣೆ ಆಗಲೇಬೇಕು. ಅಧ್ಯಕ್ಷರ ಚುನಾವಣೆಯಲ್ಲಿ ನಮ್ಮ ಬಣದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಶಾಸಕ ರಮೇಶ ಜಾರಕಿಹೊಳಿ ಅವರ ಜೊತೆ ಚರ್ಚಿಸಿ, ನಮ್ಮ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುವುದು. ಆದರೆ ವಿಜಯೇಂದ್ರ ವಿರುದ್ಧ ಅಭ್ಯರ್ಥಿಯನ್ನು ಕಣಕಕಿಳಿಸುವುದು ನಿಶ್ಚಿತ ಎಂದು ಹೇಳಿದರು.

ಪಕ್ಷದ ಹೈಕಮಾಂಡ್ ವಿಜಯೇಂದ್ರ ಅವರನ್ನು ಏಕೆ ಅಧ್ಯಕ್ಷರನ್ನಾಗಿ ಮಾಡಿದೆಯೊ ತಿಳಿದಿಲ್ಲ. ಆದರೆ  ಪಕ್ಷದ ಹಿತದೃಷ್ಟಿಯಿಂದ ಅವರನ್ನು ಬದಲಾಯಿಸಲೇಬೇಕು ಎಂಬ ನಮ್ಮ ಆಗ್ರಹ ಮುಂದುವರೆಯಲಿದೆ. ವಂಶಾಡಳಿತ ಹಾಗೂ ಭ್ರಷ್ಟಾಚಾರದ ವಿರುದ್ಧ ನಾವು ಹೋರಾಡುತ್ತಿದ್ದೇವೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಹಲವು ಕಡತಗಳಿಗೆ ವಿಜಯೇಂದ್ರ ಅವರೇ ತಮ್‌ ತಂದೆ ಯಡಿಯೂರಪ್ಪ ಅವರ ನಕಲಿ ಸಹಿ ಮಾಡಿದ್ದಾರೆ. ಇದರ ಬಗ್ಗೆ ತನಿಖೆಯಾಗಲಿ ಎಂದು ಒತ್ತಾಯಿಸಿದರು. ನಕಲಿ ಸಹಿ ಮಾಡಿರುವ ವ್ಯಕ್ತಿಯನ್ನು ಪಕ್ಷದ ಅಧ್ಯಕ್ಷ ಅಥವಾ ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಬಹುದೇ ಎಂದು ಯತ್ನಾಳ್‌ ಪ್ರಶ್ನಿಸಿದರು.

More articles

Latest article