ಹೈದರಾಬಾದ್: ಆಂಧ್ರಪ್ರದೇಶದ ಕರ್ನೂಲ್‌ನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ವೋಲ್ವೋ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 15 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ. ಹೈದರಾಬಾದ್-ಬೆಂಗಳೂರು ಹೆದ್ದಾರಿಯ ಚಿನ್ನ ಟೆಕುರು ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ.
ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಹೊರಟಿದ್ದ ಕಾವೇರಿ ಟ್ರಾವೆಲ್ಸ್ನ ವೋಲ್ವೊ ಬಸ್ ಬೆಂಕಿಗೆ ಆಹುತಿಯಾಗಿದೆ. ಕರ್ನೂಲ್‌ನಿಂದ ಸುಮಾರು 20 ಕಿ.ಮೀ ದೂರದಲ್ಲಿರುವ ಉಲ್ಲಿಂದಕೊಂಡ ಕ್ರಾಸ್ ಹತ್ತಿರ ಇಂದು ಮುಂಜಾನೆ 3.30ರ ಸುಮಾರಿಗೆ ಬಸ್‌ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ತೀವ್ರತೆ ಹೆಚ್ಚಿದ್ದರಿಂದ ಬಸ್‌ನಲ್ಲಿದ್ದ 15 ಮಂದಿ ಅಸು ನೀಗಿದ್ದರೆ 12 ಮಂದಿ ತುರ್ತು ನಿರ್ಗಮನ ದ್ವಾರ ಮುರಿದು ಜೀವ ಉಳಿಸಿಕೊಂಡಿದ್ದಾರೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಕರ್ನೂಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.
ಬಸ್‌ನಲ್ಲಿ ಸುಮಾರು 41 ಪ್ರಯಾಣಿಕರು ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಅಪಘಾತಕ್ಕೆ ಕಾರಣ ಏನೆಂದು ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅದಿಕಾರಿಯೊಬ್ಬರು ತಿಳಿಸಿದ್ದಾರೆ.
ಬಲ್ಲ ಮೂಲಗಳ ಪ್ರಕಾರ ಬೈಕ್ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ. ಬಸ್ಸಿನ ಬಾಗಿಲು ಮುಚ್ಚಿದ್ದರಿಂದ ಕೆಲವೇ ನಿಮಿಷಗಳಲ್ಲಿ ಬೆಂಕಿ ಇಡೀ ಬಸ್ ಗೆ ಆವರಿಸಿಕೊಂಡಿದೆ. ಆಗ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೈಕ್ ಗೆ ಡಿಕ್ಕಿ ಹೊಡೆದ ನಂತರ ಬಸ್ ಸಮಾರು 400 ಮೀಟರ್ ನಷ್ಟು ಮುಂದಕ್ಕೆ ಚಲಿಸಿದೆ. ಪರಿಣಾಮ ಬೈಕ್ ಸವಾರನೂ ಮೃತಪಟ್ಟಿದ್ದಾನೆ. ಬೆಳಗಿನ ಜಾವವಾಗಿದ್ದರಿಂದ ಪ್ರಯಾಣಿಕರೆಲ್ಲರೂ ನಿದ್ದೆ ಮಾಡುತ್ತಿದ್ದರು. ಏನಾಗುತ್ತಿದೆ ಎಂದು ಅರಿವಾಗುವುದಕ್ಕೂ ಮುನ್ನ ಎಲ್ಲರೂ ಸುಟ್ಟು ಕರಕಲಾದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

