ವಕ್ಫ್‌ (ತಿದ್ದುಪಡಿ) ಕಾಯ್ದೆ: ವಿಚಾರಣೆಯ ಭರವಸೆ ನೀಡಿದ ಸುಪ್ರೀಂಕೋರ್ಟ್‌

Most read

ನವದೆಹಲಿ: ವಕ್ಫ್‌ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳನ್ನು ಸೂಕ್ತ ಸಮಯದಲ್ಲಿ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್‌ ಭರವಸೆ ನೀಡಿದೆ. ತುರ್ತಾಗಿ ಈ ವಿಷಯವನ್ನು ವಿಚಾರಣೆಗೆ ಪರಿಗಣಿಸುವಂತೆ ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಎ. ಎಂ. ಸಿಂಘ್ವಿ ಅವರು, ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್‌ ಕುಮಾರ್ ಅವರಿದ್ದ ಪೀಠದ ಮುಂದೆ ಮನವಿ ಮಾಡಿದ್ದಾರೆ.

ವಕ್ಫ್‌ ತಿದ್ದುಪಡಿ ಕಾಯ್ದೆ ಸಿಂಧುತ್ವವನ್ನು ಪ್ರಶ್ನಿಸಿ ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮತ್ತು ದೆಹಲಿ ಶಾಸಕ ಅಮಾನತುಲ್ಲಾ ಖಾನ್ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ. ನಾಗರಿಕ ಹಕ್ಕುಗಳ ರಕ್ಷಣಾ ಸಂಘ, ಜಮಿಯತ್ ಉಲಮಾ-ಇ-ಹಿಂದ್, ಸಮಸ್ತ ಕೇರಳ ಜಮಾಯತ್ ಉಲೇಮಾ ಮುಂತಾದ ಸಂಸ್ಥೆಗಳೂ ನ್ಯಾಯಾಲಯಕ್ಕೆ ರಿಟ್‌ ಅರ್ಜಿ ಸಲ್ಲಿಸಿ ವಿಚಾರಣೆಗೆ ಮನವಿ ಮಾಡಿಕೊಂಡಿವೆ.

ಈ ಕಾಯ್ದೆಯು ಮುಸ್ಲಿಮರ ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿದುಕೊಳ್ಳುವ ಪಿತೂರಿಯಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ವಕ್ಫ್‌ (ತಿದ್ದುಪಡಿ) ಕಾಯ್ದೆಯನ್ನು ಕಾನೂನುಬಾಹಿರವಾಗಿ ತಿದ್ದುಪಡಿ ಮಾಡಲಾಗಿದ್ದು ಸಂವಿಧಾನದ 14, 15, 21, 25, 26, ಮತ್ತು 300-ಎ ವಿಧಿಗಳನ್ನು ಉಲ್ಲಂಘಿಸಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಅಂಕಿತ ಹಾಕಿದ್ದರು. ಲೋಕಸಭೆ ಮತ್ತು ರಾಜ್ಯಸಭೆ ಕ್ರಮವಾಗಿ ಏಪ್ರಿಲ್ 3 ಮತ್ತು 4ರಂದು ಮಸೂದೆ ಅಂಗೀಕರಿಸಿದ್ದವು.

More articles

Latest article