ಮುಡಾ ನಿವೇಶನ ಹಂಚಿಕೆ ಅಕ್ರಮ ನಡೆದಿದೆ ಎನ್ನಲಾದ ಪ್ರಕರಣದ ವಿರುದ್ಧ ಬಿಜೆಪಿ ಕೈಗೊಂಡಿರುವ ಪಾದಯಾತ್ರೆಗೆ ಜೆಡಿಎಸ್ ಬೆಂಬಲವಿಲ್ಲ ಮತ್ತು ನಮ್ಮ ಕುಟುಂಬಕ್ಕೆ ವಿಷ ಹಾಕಿದವರ ಜೊತೆ ಪಾದಯಾತ್ರೆ ಮಾಡಲ್ಲ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಇಂದು ದೆಹಲಿಯಲ್ಲಿ ಮಾತನಾಡಿದ ಅವರು, ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಬಿಜೆಪಿ ಪಾದಯಾತ್ರೆ ಬಗ್ಗೆ ಏಕಪಕ್ಷೀಯವಾಗಿ ತೀರ್ಮಾನ ತೆಗೆದುಕೊಂಡಿದೆ. ಇದಕ್ಕೆ ಜೆಡಿಎಸ್‌ನಿಂದ ನೈತಿಕ ಬೆಂಬಲವೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರೀತಮ್ ಗೌಡ ಯಾರು. ಹಾಸನದಲ್ಲಿ ಬೀದಿ ಬೀದಿಗಳಲ್ಲಿ ಪೆನ್‌ಡ್ರೈವ್ ಸಿಗಲು ಕಾರಣನಾದ ವ್ಯಕ್ತಿ ಆತ. ಆತನ ಜತೆಗೆ ನಾನು ವೇದಿಕೆ ಹಂಚಿಕೊಳ್ಳಬೇಕಾ? ನಮ್ಮ ಕುಟುಂಬಕ್ಕೆ ವಿಷ ಹಾಕಿದವರ ಜತೆಗೆ ಪಾದಯಾತ್ರೆಯಲ್ಲಿ ಭಾಗಿಯಾಗಬೇಕಾ? ಎಂದು ಕೇಳಿದ್ದಾರೆ.
ಕೇರಳದಲ್ಲಿ ನೂರಾರು ಜನರ ಜೀವ ಹಾನಿಯಾಗಿದೆ. ಕರ್ನಾಟಕದಿಂದ ಹೋದವರು ವಾಪಸ್ ಬರಲು ಸಮಸ್ಯೆ ಎದುರಿಸುತ್ತಿದ್ದಾರೆ. ರಾಜ್ಯದಲ್ಲೂ ಹಲವು ಪ್ರದೇಶಗಳು ಜಲಾವೃತವಾಗಿವೆ. ಎಲ್ಲರೂ ಕೃಷಿ ಚಟುವಟಿಕೆಯಲ್ಲಿ ಭಾಗವಹಿಸುವ ಈ ಸಮಯದಲ್ಲಿ ಪಾದಯಾತ್ರೆ ಸೂಕ್ತವಲ್ಲ ಎಂದು ಪಕ್ಷದ ಕೋರ್ ಕಮಿಟಿ ಅಧ್ಯಕ್ಷರು ನಿರ್ಧರಿಸಿದ್ದಾರೆ. ಆದರೆ ಬಿಜೆಪಿ ಈ ನಿರ್ಧಾರದಿಂದಾಗಿ ನನ್ನ ಮನಸ್ಸಿಗೆ ನೋವು ತಂದಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.