ರಾಜ್ಯದಿಂದ ಆಯ್ಕೆ ಆಗಿರುವ ಬಿಜೆಪಿಯ ಸಂಸದರು ಏಕೆ ರಾಜ್ಯದ ಪರವಾಗಿ ಧ್ವನಿ ಎತ್ತುತ್ತಿಲ್ಲ. ಹೆಚ್ ಡಿ ಕುಮಾರಸ್ವಾಮಿ ಯಾಕೆ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸುತ್ತಿಲ್ಲ? ಇವರದ್ದು ಮಲತಾಯಿ ಧೋರಣೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿ ಕಿಡಿಕಾರಿದ್ದಾರೆ.
ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯಿಂದ ತೆರಿಗೆಯಲ್ಲಿ ನಮಗೆ ಅನ್ಯಾಯ ಆಗಿದೆ. ಕೇಂದ್ರ ರಾಜ್ಯಗಳಿಗೆ ಬಿಡುಗಡೆ ಮಾಡಿರುವ ತೆರಿಗೆ ಪಾಲಿನಲ್ಲಿ ಉತ್ತರ ಪ್ರದೇಶ, ಮಧ್ಯಪ್ರದೇಶಕ್ಕೆ ಬಹುಪಾಲು ಹೋಗಿ ರಾಜ್ಯಕ್ಕೆ ಅನ್ಯಾಯ ಮಾಡಿ ಮಲತಾಯಿ ಧೋರಣೆ ತೋರಿದೆ ಎಂದು ವಾಗ್ದಾಳಿ ನಡೆಸಿದರು.
ಮೇಕೆದಾಟು ಯೋಜನೆಗೆ ಅನುಮತಿ ಕೊಡಿ ಎಂದು ಕೇಳುತ್ತಲೇ ಇದ್ದೇವೆ. ಮಹದಾಯಿಗೂ ಅನುಮತಿ ಕೇಳಿದ್ದೇವೆ. ಕೇಂದ್ರ ಸರ್ಕಾರ ಅನುಮತಿ ಕೊಡದೆ ಅನ್ಯಾಯ ಮಾಡುತ್ತಿದೆ. ಹೆಚ್ ಡಿ ಕುಮಾರಸ್ವಾಮಿ ಯಾಕೆ ಅನುಮತಿ ಕೊಡಿಸುತ್ತಿಲ್ಲ? ರಾಜ್ಯದಿಂದ ಆಯ್ಕೆ ಆಗಿರುವ ಬಿಜೆಪಿಯ ಸಂಸದರು ಏಕೆ ರಾಜ್ಯದ ಪರವಾಗಿ ಧ್ವನಿ ಎತ್ತುತ್ತಿಲ್ಲ. ಕರ್ನಾಟಕ ರಾಜ್ಯಕ್ಕೆ ಏಕೆ ಮಲತಾಯಿ ಧೋರಣೆ ಎಂದು ಕೇಂದ್ರ ಸರ್ಕಾರವನ್ನು ಇವರ್ಯಾರೂ ಪ್ರಶ್ನಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿ ವರ್ಷ 4 ಲಕ್ಷ ಕೋಟಿಗೂ ಅಧಿಕ ತೆರಿಗೆ ಕೇಂದ್ರಕ್ಕೆ ಕೊಡ್ತಾ ಇದ್ದೀವಿ. ಆದರೆ ವಾಪಾಸ್ ನಮಗೆ ಬರುತ್ತಿರುವುದು 60ಸಾವಿರ ಕೋಟಿ ಮಾತ್ರ. 100 ಪೈಸೆಗೆ 15 ಪೈಸೆ ಮಾತ್ರ ವಾಪಾಸ್ ಬರುತ್ತಿದೆ. ಇದು ಅನ್ಯಾಯ ಅಲ್ವಾ? ಏಕೆ ಬಿಜೆಪಿ ಸಂಸದರು ಪ್ರಶ್ನಿಸುತ್ತಿಲ್ಲ ಎಂದು ಖಾರವಾಗಿ ಪ್ರಶ್ನಿಸಿದರು.