ಹಾಸನ : ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಬೇಲೂರು ತಾಲೂಕಿನಲ್ಲಿ ಮತ್ತೆ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಒಂದರ ಬೆನ್ನಲ್ಲೇ ಮತ್ತೊಂದು ಜೀವ ಬಲಿಯಾಗುತ್ತಿರುವ ಘಟನೆಗಳಿಂದ ಸ್ಥಳೀಯರು ತೀವ್ರ ಆತಂಕಕ್ಕೊಳಗಾಗಿದ್ದಾರೆ.
ಬೇಲೂರು ತಾಲೂಕಿನ ನಾಗೇನಹಳ್ಳಿ ಗ್ರಾಮದ ನಿವಾಸಿ ಹಫೀಸ್ ಉರ್ ರೆಹಮಾನ್ ಅಲಿಯಾಸ್ ಬಾಬು (57) ಮೃತಪಟ್ಟವರು. ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಎದುರಾದ ಕಾಡಾನೆಯೊಂದು ಅವರ ಮೇಲೆ ದಾಳಿ ನಡೆಸಿದೆ. ತಪ್ಪಿಸಿಕೊಳ್ಳಲು ಅವಕಾಶ ನೀಡದೆ ಕಾಲಿನಿಂದ ತುಳಿದ ಪರಿಣಾಮ ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅರೇಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೇಲೂರು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.
ಜಯಮ್ಮ ಸಾವಿನ ಬೆನ್ನಲ್ಲೇ ಮತ್ತೊಂದು ಬಲಿ
ಇತ್ತೀಚೆಗಷ್ಟೇ ಬೇಲೂರು ತಾಲೂಕಿನ ಕುಶಾವರ ಗ್ರಾಮದ ಸಮೀಪ ಕಾಡಾನೆ ದಾಳಿಗೆ ಜಯಮ್ಮ ಎಂಬ ಮಹಿಳೆ ಮೃತಪಟ್ಟಿದ್ದರು. ಎಂದಿನಂತೆ ಕುರಿಗಳನ್ನು ಮೇಯಿಸಲು ಗ್ರಾಮದ ಹೊರವಲಯದ ತೋಟದಂಚಿಗೆ ತೆರಳಿದ್ದ ವೇಳೆ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿ ಅವರನ್ನು ಕೊಂದು ಹಾಕಿತ್ತು.
ಈ ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು, ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವವರೆಗೂ ಅಂತ್ಯಕ್ರಿಯೆ ನಡೆಸುವುದಿಲ್ಲ ಎಂದು ಪಟ್ಟುಹಿಡಿದು ಜಯಮ್ಮ ಅವರ ಮೃತದೇಹವನ್ನಿಟ್ಟು ಪ್ರತಿಭಟನೆ ನಡೆಸಿದ್ದರು.
ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕ ಹೆಚ್.ಕೆ. ಸುರೇಶ್ ಹಾಗೂ ಸಂಸದ ಶ್ರೇಯಸ್ ಪಟೇಲ್ ಅವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದರು. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಶಾಸಕರು ಮತ್ತು ಸಂಸದರು ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.
ಆನೆ ಸ್ಥಳಾಂತರಕ್ಕೆ ಆಗ್ರಹ: ಸರ್ಕಾರದ ವಿರುದ್ಧ ಆಕ್ರೋಶ
ಬೇಲೂರು ಭಾಗದಲ್ಲಿ ನಿರಂತರವಾಗಿ ನಡೆಯುತ್ತಿರುವ ಕಾಡಾನೆ ದಾಳಿಯಿಂದ ಕಾಫಿ ಬೆಳೆಗಾರರು, ತೋಟದ ಕಾರ್ಮಿಕರು ಹಾಗೂ ಗ್ರಾಮಸ್ಥರು ಜೀವಭಯದಲ್ಲೇ ಬದುಕುವಂತಾಗಿದೆ. ತೋಟಗಳಿಗೆ ಕೆಲಸಕ್ಕೆ ತೆರಳುವುದೂ ಅಪಾಯಕಾರಿಯಾಗಿ ಪರಿಣಮಿಸಿದೆ.
ಕಾಡಾನೆಗಳನ್ನು ಓಡಿಸುವ ಕಾರ್ಯಾಚರಣೆಯನ್ನು ಇಂದಿನಿಂದ ಆರಂಭಿಸಲು ಸಿದ್ಧತೆ ನಡೆಸಲಾಗಿತ್ತು. ಆದರೆ ಕಾರ್ಯಾಚರಣೆ ಆರಂಭಕ್ಕೂ ಮುನ್ನವೇ ಮತ್ತೊಂದು ಜೀವ ಬಲಿಯಾಗಿರುವುದು ಸ್ಥಳೀಯರ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿದೆ.
ಕಾಡಾನೆಗಳನ್ನು ಕೂಡಲೇ ಸ್ಥಳಾಂತರಿಸಬೇಕು, ದಾಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಹಾಗೂ ಜನರ ಜೀವ ಮತ್ತು ಬೆಳೆಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ. ನಿರಂತರ ಸಾವು-ನೋವುಗಳ ನಡುವೆಯೂ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯದಿರುವುದಕ್ಕೆ ಸರ್ಕಾರ ಮತ್ತು ಅರಣ್ಯ ಇಲಾಖೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿದೆ.

