ಬೆಂಗಳೂರು: ಅಪ್ರಾಪ್ತ ಯುವತಿಯ ದೂರಿನ ಹಿನ್ನೆಲೆಯಲ್ಲಿ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸುವ ಸಾಧ್ಯತೆ ಇದೆ.
ಮಾರ್ಚ್ 14ರಂದು ಸದಾಶಿವನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನಿನ್ನೆ ನೋಟೀಸ್ ಜಾರಿ ಮಾಡಲಾಗಿತ್ತು. ನಿನ್ನೆಯೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಯಡಿಯೂರಪ್ಪ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇಂದು ಅವರನ್ನು ಬಂಧಿಸುವ ಸಾಧ್ಯತೆ ಇದೆ.
ತನ್ನಅಪ್ರಾಪ್ತ ವಯಸ್ಸಿನ ಮಗಳೊಂದಿಗೆ ನೆರವು ಕೇಳಿಕೊಂಡು ಯಡಿಯೂರಪ್ಪ ನಿವಾಸಕ್ಕೆ ಬಂದಿದ್ದ ಮಹಿಳೆಯೋರ್ವರು ತನ್ನ ಮಗಳ ಜೊತೆ ಯಡಿಯೂರಪ್ಪ ಅನುಚಿತವಾಗಿ ನಡೆದುಕೊಂಡು, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರು ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಯಡಿಯೂರಪ್ಪಅವರ ವಿರುದ್ಧ ಪೋಕ್ಸೋ ಅಡಿಯಲ್ಲಿ ದೂರು ದಾಖಲಾಗಿತ್ತು. ಮಾರ್ಚ್ 14ರಂದು ದೂರು ದಾಖಲಾದ ನಂತರ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿತ್ತು. ಕೆಲವು ದಿನಗಳ ಹಿಂದಷ್ಟೇ ದೂರು ಸಲ್ಲಿಸಿದ್ದ ಮಹಿಳೆ ಅನಾರೋಗ್ಯದಿಂದ ಮೃತಪಟ್ಟಿದ್ದರು.
ಈ ನಡುವೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಬೇಕು ಎಂದು ಯಡಿಯೂರಪ್ಪ ಸಿಐಡಿಗೆ ಮನವಿ ಮಾಡಿದ್ದಾರೆ. ತಮ್ಮ ವಿರುದ್ಧ ದಾಖಲಾದ ಎಫ್ ಐ ಆರ್ ರದ್ದುಗೊಳಿಸಬೇಕು ಎಂದು ಕೋರಿ ಅವರು ಈಗಾಗಲೇ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.