ವಿಜಯಪುರ: ಜಿಲ್ಲೆಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಗೆ ಮಹಿಳೆಯೊಬ್ಬಳು ಸೋಮವಾರ ತನ್ನ ನಾಲ್ವರು ಮಕ್ಕಳೊಂದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದುಈ ದುರಂತದಲ್ಲಿ ನಾಲ್ವರು ಮಕ್ಕಳು ಅಸು ನೀಗಿದ್ದಾರೆ. ಆದರೆ ಸ್ಥಳೀಯರು ಮಹಿಳೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೃತಪಟ್ಟವರನ್ನು ಕೊಲ್ಹಾರ ತಾಲ್ಲೂಕಿನ ತೆಲಗಿ ಗ್ರಾಮದ ತನು ನಿಂಗರಾಜ ಭಜಂತ್ರಿ (5), ರಕ್ಷಾ ನಿಂಗರಾಜ ಭಜಂತ್ರಿ (3) ಹಾಗೂ ಅವಳಿ ಮಕ್ಕಳಾದ ಹಸೇನ ನಿಂಗರಾಜ ಭಜಂತ್ರಿ, ಹುಸೇನ ನಿಂಗರಾಜ ಭಜಂತ್ರಿ (13 ತಿಂಗಳು) ಎಂದು ಗುರುತಿಸಲಾಗಿದೆ. ಬೇನಾಳ ಬ್ರಿಜ್, ಪಾರ್ವತಿಕಟ್ಟಾ ಸೇತುವೆ ಸಮೀಪ ಈ ಅವಘಡ ಸಂಭವಿಸಿದೆ.
ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಮೃತ ಮಕ್ಕಳ ತಾಯಿ ಭಾಗ್ಯಳನ್ನು ಮೀನುಗಾರರು ಕಾಲುವೆಯಿಂದ ಎತ್ತಿ ಬದುಕಿಸಿದ್ದಾರೆ. ಕೌಟುಂಬಿಕ ಕಲಹದಿಂದ ನೊಂದ ಮಹಿಳೆ ತನ್ನ ನಾಲ್ವರು ಮಕ್ಕಳೊಂದಿಗೆ ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ನಿಡಗುಂದಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ರಕ್ಷಣಾ ಮೃತ ದೇಹಗಳನ್ನು ಹೊರ ತೆಗೆದಿದ್ದಾರೆ.