ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಡಿಸೆಂಬರ್ 6 ಕ್ಕೆ ಮುಂದೂಡಲಾಗಿದೆ. ಈ ಪ್ರಕರಣದ ವಿಚಾರಣೆ ಇಂದು ಮಧ್ಯಾಹ್ನ ನಡೆಯಬೇಕಿತ್ತು. ಆದರೆ ಸಮಯದ ಅಭಾವದ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್ 6 ಕ್ಕೆ ಮುಂದೂಡಿತು.
ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ಕುರಿತು ಕಳೆದ ಗುರುವಾರ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತ್ತು. ಡಿಸೆಂಬರ್ 2 ರಂದು ವಿಚಾರಣೆ ಪೂರ್ಣಗೊಳಿಸಿ ಅಂದೇ ತೀರ್ಪು ಪ್ರಕಟಿಸುವುದಾಗಿ ಪೀಠ ಹೇಳಿತ್ತು. ಆದರೆ, ಸಮಯದ ಕೊರತೆಯಿಂದ ಡಿಸೆಂಬರ್ 6 ಕ್ಕೆ ವಿಚಾರಣೆ ನಡೆಸಿ, ತೀರ್ಪು ನೀಡುವುದಾಗಿ ತಿಳಿಸಲಾಗಿದೆ.
ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ವಿಶೇಷ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್, ಪ್ರಕರಣ ಸಂಬಂಧ ಈಗಾಗಲೇ ಆರೋಪಪಟ್ಟಿ ಸಲ್ಲಿಸಲಾಗಿದೆ. ಪೋಕ್ಸೊ ಕಾಯಿದೆ ಸೆಕ್ಷನ್ 75 ರ ಪ್ರಕಾರ ಮೂರು ತಿಂಗಳಲ್ಲಿ ಸಾಕ್ಷ್ಯಗಳನ್ನು ದಾಖಲಿಸಿಕೊಳ್ಳಬೇಕು. ಆದರೆ ಈಗಾಗಲೇ ಆರು ತಿಂಗಳು ಕಳೆದಿದೆ. ಆದ್ದರಿಂದ ಅರ್ಜಿದಾರ ಆರೋಪಿಯನ್ನು ಪೋಕ್ಸೊ ವಿಶೇಷ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ವಿನಾಯಿತಿ ನೀಡಿ ಈ ಹಿಂದೆ ನೀಡಿರುವ ಮಧ್ಯಂತರ ಆದೇಶ ತೆರವುಗೊಳಿಸಬೇಕು ಎಂದು ಕೋರಿದ್ದರು.
ಅರ್ಜಿದಾರರ ಪರ ಹಾಜರಿದ್ದ ಹಿರಿಯ ವಕೀಲ ಸಿ ವಿ ನಾಗೇಶ್, ಅರ್ಜಿಗೆ ಸಂಬಂಧಿಸಿದಂತೆ ತಮ್ಮ ವಾದವನ್ನು ಡಿ.2 ಸೋಮವಾರ ಪೂರ್ಣಗೊಳಿಸುವುದಾಗಿ ತಿಳಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ನಿಗದಿಪಡಿಸಲಾಗುವುದು. ಅಂದೇ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿತು. ಜತೆಗೆ ಯಡಿಯೂರಪ್ಪ ಅವರು ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದಕ್ಕೆ ನೀಡಿದ್ದ ವಿನಾಯಿತಿ ಆದೇಶವನ್ನು ಮುಂದುವರೆಸಿತ್ತು.