ನವದೆಹಲಿ : ಅಂತೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಹೋದರ ಡಿ.ಕೆ. ಸುರೇಶ್ ಇಂದು ಬೆಳಗ್ಗೆ ಎಐಸಿಸಿ ವರಿಷ್ಠೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ನಿನ್ನೆಯಷ್ಟೇ ದೆಹಲಿಗೆ ತೆರಳಿರುವ ಡಿ.ಕೆ. ಶಿವಕುಮಾರ್ ಹಾಗೂ ಸಹೋದರ ಡಿ.ಕೆ. ಸುರೇಶ್ ಸೋನಿಯಾ ಗಾಂಧಿ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದರು. ರಾಜ್ಯದಲ್ಲಿ ಬಹುಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಸ್ಥಾನ ಅಧಿಕಾರ ಹಂಚಿಕೆ ಬಗ್ಗೆ ಭೇಟಿಯಲ್ಲಿ ಚರ್ಚೆಯಾಗಿದೆ ಎನ್ನಲಾಗಿದೆ. ಪ್ರಸ್ತುತ ರಾಜ್ಯ ರಾಜಕೀಯ, ಅಸ್ಸಾಂ ಚುನಾವಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ನಾನು ಇಲ್ಲಿಗೆ ಬಂದಿರೋದು ರಾಜಕಾರಣ ಮಾಡೋಕೆ, ಸುಮ್ಮನೆ ಗಾಳಿ ಕುಡಿಯೋಕೆ ಬಂದಿಲ್ಲ. ವರಿಷ್ಠರ ಬಳಿ ಏನು ಮಾತನಾಡಬೇಕೋ ಅದನ್ನ ಮಾತನಾಡಿದ್ದೀನಿ. ಎಲ್ಲದಕ್ಕೂ ಕಾಲ ಉತ್ತರ ಕೊಡುತ್ತೆ ಎಂದರು.

